ತೆಲಂಗಾಣ ರಾಷ್ಟ್ರೀಯ ಸಮಿತಿಯ ಶಾಸಕರಿಗೆ ಕೊರೊನಾ ಸೋಂಕು

ಹೈದರಾಬಾದ್, ಜೂನ್ 14 : ತೆಲಂಗಾಣ ರಾಷ್ಟ್ರೀಯ ಸಮಿತಿಯ(ಟಿ.ಆರ್.ಎಸ್) ಶಾಸಕರೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಶಾಸಕರ ಸಂಪರ್ಕದಲ್ಲಿದ್ದ ಸಚಿವರನ್ನು ಮತ್ತು ಕುಟುಂಬದವರನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ಆಡಳಿತ ಪಕ್ಷ ತೆಲಂಗಾಣ ರಾಷ್ಟ್ರೀಯ ಸಮಿತಿಯ ಶಾಸಕ ಯಡಿಗಿರಿ ರೆಡ್ಡಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅವರ ಸಂಪರ್ಕದಲ್ಲಿದ್ದ ರಾಜ್ಯ ಹಣಕಾಸು ಸಚಿವ ಟಿ. ಹರೀಶ್ ರಾವ್ ಅವರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಶಾಸಕರ ಕುಟುಂಬಸ್ಥರು ಮತ್ತು ಸಿಬ್ಬಂದಿಗಳನ್ನು ಸಂಪೂರ್ಣವಾಗಿ ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದ್ದು, ಶಾಸಕರ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚಲಾಗುತ್ತಿದೆ. ಶಾಸಕರು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದ್ದು, ಅದರಲ್ಲಿ ಭಾಗಿಯಾಗಿದ್ದವರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.
ಶಾಸಕ ಯಡಿಗಿರಿ ರೆಡ್ಡಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಶಾಸಕರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ದೇಶದಾದ್ಯಂತ ಕೊರೊನಾ ವೈರಸ್ ಹಾವಳಿ ವಿಪರೀತವಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಸಂಖ್ಯೆ ವೇಗವಾಗಿ ಏರಿಕೆ ಕಾಣುತ್ತಿದೆ.

ತೆಲಂಗಾಣದಲ್ಲಿ ಶನಿವಾರ 253 ಹೊಸ ಕೊರೊನಾ ಪ್ರಕರಣಗಳನ್ನು ವರದಿಯಾಗಿದ್ದು, ಇದರೊಂದಿಗೆ ಕೊರೊನಾ ಪ್ರಕರಣಗಳ ಸಂಖ್ಯೆ 4,737ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.








