ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಂಗಳೂರು ಸ್ಮಾರ್ಟ್ ಸಿಟಿ ಲಿ. ವತಿಯಿಂದ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು/ಯೋಜನೆಗಳ ಬಗ್ಗೆ ಸಭೆ ನಡೆಸಲಾಗಿದೆ. ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಅಧ್ಯಕ್ಷತೆಯಲ್ಲಿ ಸ್ಮಾರ್ಟ್ ಸಿಟಿ ಕಛೇರಿಯಲ್ಲಿ ನಗರ ಮಟ್ಟದ ಸಲಹಾ ವೇದಿಕೆಯ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್, ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಂಗಳೂರು ಸ್ಮಾರ್ಟ್ ಸಿಟಿ ಲಿ. ಅಡಿ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅವಶ್ಯಕ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಂಡು, ನಿಗದಿತ ಸಮಯದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ಟೆಂಡರ್ ಶ್ಯೂರ್ ಮಾದರಿಯಲ್ಲಿ ಕೈಗೆತ್ತಿಕೊಂಡಿರುವ 36 ರಸ್ತೆಗಳ ಪೈಕಿ, ಸದ್ಯ ನಡೆಯುತ್ತಿರುವ ಕಾಮಗಾರಿಗಳ ಬಳಿ ಅವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು, ಸಮರ್ಪಕವಾಗಿ ಬ್ಯಾರಿಕೇಡ್ಗಳನ್ನು ಅಳವಡಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಬೇಕು. ಕೆ.ಆರ್.ಮಾರುಕಟ್ಟೆಯನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ತ್ವರಿತವಾಗಿ ಟೆಂಡರ್ ಕರೆದು ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ಹೇಳಿದರು.
ಈ ವೇಳೆ ಕೆ.ಆರ್ ಮಾರುಕಟ್ಟೆ ಜಂಕ್ಷನ್ ಅನ್ನು ಅಭಿವೃದ್ಧಿಗೊಳಿಸುವ ಬಗ್ಗೆ ವಿಷಯ ಪ್ರಸ್ತಾಪಿಸಿದ ಬೆಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶರು, ಕೆ.ಆರ್.ಮಾರುಕಟ್ಟೆ ಜಂಕ್ಷನ್ ಅನ್ನು ಉನ್ನತ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಈಗಾಗಲೇ ಸ್ಥಳ ತನಿಖೆ ಮಾಡಿ ಸಮೀಕ್ಷೆ ನಡೆಸಿ ನೀಲನಕ್ಷೆ ಸಿದ್ಧಪಡಿಸಲಾಗಿದೆ. ಈ ಪೈಕಿ ಬಿಎಂಟಿಸಿ ಬಸ್ ಸಂಚರಿಸುವ ಸ್ಥಳ, ಆಟೋ ನಿಲ್ದಾಣ, ಪಾದಚಾರಿ ಮಾರ್ಗ ಸೇರಿದಂತೆ ಖಾಲಿ ಜಾಗವನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಈ ವೇಳೆ ಸಂಸದ ಪಿ.ಸಿ.ಮೋಹನ್, ಶಾಸಕ ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್ ಖಾನ್, ರಿಜ್ವಾನ್ ಹರ್ಷದ್, ಭಾಗವಹಿಸಿ ಸಲಹೆ ನೀಡಿದರು.








