ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಗುಡುಗು ಸಹಿತವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಐವರು ಸಾವನ್ನಪ್ಪಿದ್ದಾರೆ. ಈ ಸಂದರ್ಭದಲ್ಲಿ ಏಪ್ರಿಲ್ 12ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸಾರ್ವಜನಿಕರಿಗೆ ಮುನ್ಸೂಚನೆ ನೀಡಿದೆ.
ಈ ಪೈಕಿ ಏಪ್ರಿಲ್ 8 ರಂದು ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಹಲವೆಡೆ, ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ,ಧಾರವಾಡ, ಹಾವೇರಿ, ರಾಯಚೂರು, ಕೊಪ್ಪಳ ಜಿಲ್ಲೆಗಳ ಒಂದಷ್ಟು ಕಡೆಗಳಲ್ಲಿ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆ ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.








