ಸೂರತ್ : ಮೋದಿ ಉಪನಾಮದ ಪದದ ಬಳಕೆಯ ಹೇಳಿಕೆ ಕುರಿತು ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡಲು ಸೂರತ್ ಕೋರ್ಟ್ ನಿರಾಕರಿಸಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮತ್ತೆ ಸಂಕಷ್ಟ ಶುರುವಾಗಿದೆ.
ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಈ ಹಿಂದೆ ರಾಹುಲ್ ಗಾಂಧಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದನ್ನು ನ್ಯಾಯಾಲಯ ನಿರಾಕರಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ. ಏಪ್ರಿಲ್ 3 ರಂದು ಪ್ರಕರಣದಲ್ಲಿ ಅಪರಾಧ ಸಾಬೀತಾದ ನಂತರ ಮೇಲ್ಮನವಿ ಸಲ್ಲಿಸಿದ್ದ ರಾಹುಲ್ ಗಾಂಧಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿತ್ತು.
ವಯನಾಡ್ ನ ಲೋಕಸಭಾ ಸಂಸದ ರಾಹುಲ್ ಗಾಂಧಿ ಅವರನ್ನು ಸೂರತ್ ನ ಕೆಳ ನ್ಯಾಯಾಲಯವು ಮಾರ್ಚ್ 23 ರಂದು ಸೆಕ್ಷನ್ 499 ಮತ್ತು 500 (ಮಾನನಷ್ಟ) ಅಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಅನರ್ಹಗೊಳಿಸಲಾಗಿತ್ತು. 2019ರ ಲೋಕಸಭೆ ಚುನಾವಣೆ ವೇಳೆ ಭಾಷಣ ಮಾಡಿದ್ದ ರಾಹುಲ್ ಗಾಂಧಿ ಅವರು, ಮೋದಿ ಎಂಬ ಹೆಸರು ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು. ಹೀಗಾಗಿ ಅವರ ವಿರುದ್ಧ ದೂರು ದಾಖಲಾಗಿತ್ತು.
ರಾಹುಲ್ ಹೇಳಿಕೆಯಿಂದ ಸಿಟ್ಟಿಗೆದ್ದಿದ್ದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ, ದೂರು ದಾಖಲು ಮಾಡಿದ್ದರು. ಈ ಪ್ರಕರಣ ಸಂಬಂಧ ಗುಜರಾತ್ನ ಸೂರತ್ ನ್ಯಾಯಾಲಯವು ಮಾರ್ಚ್ 23 ರಂದು ಮಹತ್ವದ ತೀರ್ಪು ನೀಡಿತ್ತು. ಎರಡೂ ಕಡೆಯ ವಾದಗಳನ್ನೂ ಆಲಿಸಿದ್ದ ನ್ಯಾಯಾಲಯ ರಾಹುಲ್ ಗಾಂಧಿಯವರನ್ನು ದೋಷಿ ಎಂದು ತೀರ್ಪು ನೀಡಿತ್ತು. ಅಲ್ಲದೆ, 2 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂಪಾಯಿ ದಂಡವನ್ನು ವಿಧಿಸಿತ್ತು. ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿ, 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ತೀರ್ಪು ನೀಡಿತ್ತು.