ರಾಜ್ಯದಲ್ಲಿನ ಎಲ್ಲ ನಿರುದ್ಯೋಗಿಗಳಿಗೂ ನಿರುದ್ಯೋಗ ಭತ್ಯೆ ನೀಡಬೇಕೆಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ ಆಗ್ರಹಿಸಿ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದೆ.
ಜಿಲ್ಲಾ ಸಂಚಾಲಕ ಎಸ್. ಪರಶುರಾಮ್ ಮಾತನಾಡಿ, ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ಮೊದಲ ಮಂತ್ರಿಮಂಡಲದ ಸಭೆಯಲ್ಲಿಯೆ ತೀರ್ಮಾನಿಸಿ ಷರತ್ತುಬದ್ಧ ಆದೇಶ ಹೊರಡಿಸಿದೆ. ಆದರೆ ಪದವಿ ಮತ್ತು ಡಿಪ್ಲೊಮಾ ಮುಗಿಸಿರುವ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯ ಪ್ರಕಾರ, 2022-23ನೇ ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ. ಅದೂ ಎರಡು ವರ್ಷಗಳ ಅವಧಿಗೆ ಮಾತ್ರ ಎಂಬ ಷರತ್ತು ಇದೆ. ಹಾಗಾದರೆ, ವೃತ್ತಿಪರ ಕೋರ್ಸ್‌ಗಳನ್ನು ಮುಗಿಸಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಜನರು ನಿರುದ್ಯೋಗಿಗಳಲ್ಲವೆ ಎಂದು ಪ್ರಶ್ನಿಸಿದರು. ನಿಜವಾಗಿಯೂ ನಿರುದ್ಯೋಗದ ಬಿಸಿ ತಟ್ಟುತ್ತಿರುವುದು ಹತ್ತಾರು ವರ್ಷಗಳಿಂದ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಜನರಿಗೆ. ಅವರಿಗೆ ನಿರುದ್ಯೋಗ ಭತ್ಯೆ ನೀಡಬೇಕಾಗಿರುವುದು ಅತ್ಯವಶ್ಯಕ ಎಂದು ಮನವಿ ಮಾಡಿದರು.
ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಸರ್ಕಾರವೇ ನಿಗದಿಪಡಿಸಿರುವ ವಯೋಮಿತಿಯಲ್ಲಿರುವ ಎಲ್ಲ ನಿರುದ್ಯೋಗಿಗಳಿಗೂ ನಿರುದ್ಯೋಗ ಭತ್ಯೆಯನ್ನು ದೊರಕುವವರೆಗೂ ಹೋರಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.








