ಬೆಂಗಳೂರು : ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವೆಡೆ ಅಧಿಕಾರಿಗಳು ನಿದ್ದೆಗಣ್ಣಿನಲ್ಲಿ ಬಾಗಿಲು ತೆರೆಯುತ್ತಿದ್ದಂತೆ ಲೋಕಾಯುಕ್ತ (Lokayukta Raid) ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಸಿಲಿಕಾನ್ ಸಿಟಿಯ ಕೆಆರ್ಪುರಂ ತಹಶೀಲ್ದಾರ್ ಅಜಿತ್ ರೈ ಮನೆ ಸೇರಿದಂತೆ 10 ಕಡೆ ಲೋಕಾಯುಕ್ತ ದಾಳಿ ನಡೆಸಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಮನೆ, ಕಚೇರಿ ಸೇರಿದಂತೆ 10 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಮನೆಯಲ್ಲಿದ್ದ 40 ಲಕ್ಷ ರೂ. ನಗದು ಸೇರಿದಂತೆ ಅನೇಕ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಾಗಲಕೋಟೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳ ಮನೆ ಮೇಲೂ ಲೋಕಾಯುಕ್ತ ದಾಳಿ ಮಾಡಿದೆ. ಈ ಸಂದರ್ಭದಲ್ಲಿ ಅಧಿಕಾರಿಯ ಮನೆಯಲ್ಲಿ ಆಮೆಗಳು ಪತ್ತೆಯಾಗಿವೆ.
ಮನೆಯಲ್ಲಿ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಬೀಳಗಿ ಭಾಗದ ಸಹಾಯಕ ಕೃಷಿ ನಿರ್ದೇಶಕ ಕೃಷ್ಣ ಶಿರೂರು ಮನೆ ಮೇಲೆ ದಾಳಿ ನಡೆಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಲೋಕಾಯುಕ್ತ ಡಿಎಸ್ಪಿ ಪುಷ್ಪಲತಾ ನೇತೃತ್ವದಲ್ಲಿ ಈ ದಾಳಿ ನಡೆದಿದೆ.








