ರಾಜ್ಯ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ‘ಗೃಹ ಲಕ್ಷ್ಮಿ’ ಯೋಜನೆಗೆ ಆಗಸ್ಟ್ 27 ರಂದು ಚಾಲನೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ವಿಕಾಸ ಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿ, ಜಿಪಂ ನಿರ್ವಹಣಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದದ ನಂತರ ಮಾತನಾಡಿದ ಅವರು, ಆಗಸ್ಟ್ 27 ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಗಲಿದ್ದು, ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದ 11 ಸಾವಿರ ಕಡೆ ಏಕಕಾಲಕ್ಕೆ ಚಾಲನೆ ಸಿಗಲಿದ್ದು, ಎಲ್ಲಾ ಗ್ರಾಮ ಪಂಚಾಯ್ತಿ, ನಗರಸಭೆ, ಪುರಸಭೆಗಳಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದರು.








