ನಟ ಉಪೇಂದ್ರ ಅವರ ಹೇಳಿಕೆ ಸದ್ಯ ವಿವಾದಕ್ಕೆ ದಾರಿ ಮಾಡಿಕೊಟ್ಟಿದೆ. ಈ ಹೇಳಿಕೆ ಖಂಡಿಸಿ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಉಪೇಂದ್ರ ವಿರುದ್ಧ ಅಟ್ರಾಸಿಟಿ ದೂರು ದಾಖಲಿಸಿದ್ದಾರೆ.
ಉತ್ತಮ ಪ್ರಜಾಕೀಯ ಪಕ್ಷ ಸ್ಥಾಪನೆಯಾಗಿ ನಾಲ್ಕು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ‘ಪ್ರಜಾಕೀಯ ದಿನ’ ಆಚರಣೆಯ ಹಿನ್ನೆಲೆಯಲ್ಲಿ ಉಪೇಂದ್ರ ಅವರು ಫೇಸ್ ಬುಕ್ ನಲ್ಲಿ ಲೈವ್ ಬಂದಿದ್ದರು. ಈ ವೇಳೆ ಅವರು ಬಳಸಿದ ಗಾದೆ ಮಾತಿಗೆ ಈಗ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಇತರೆ ಕೆಲವು ರಾಜಕೀಯ ಪಕ್ಷಗಳಿಗಿಂತಲೂ ಹೆಚ್ಚು ಮತಗಳನ್ನು ಯಾವುದೇ ಪ್ರಚಾರವಿಲ್ಲದೆ ಪಡೆದಿದ್ದಾರೆ ಎಂದು ಹೆಮ್ಮೆಯಿಂದ ಹೇಳಲು ಬಯಸುತ್ತೇನೆ ಎಂದ ನಂತರ, ‘ಊರೆಂದರೆ ಹೊಲೆಗೇರಿ ಇದ್ದೇ ಇರುತ್ತದೆ’ ಎಂದು ಹೇಳಿದ್ದು ಈ ಮಾತಿಗೆ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಹೇಳಿಕೆ ವಿರೋಧಿಸಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್ ಎಂಬುವರು ಸಿಕೆ ಅಚ್ಚುಕಟ್ಟು ಪ್ರದೇಶ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಕುರಿತು ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಉಪೇಂದ್ರರ ಈ ಹೇಳಿಕೆಯನ್ನು ವಿರೋಧಿಸಿ ರಾಮನಗರದಲ್ಲಿ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.








