ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮತ್ತೊಮ್ಮೆ ತನಿಖೆ ನಡೆಸಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ಸೌಜನ್ಯಾ ಪ್ರಕರಣದ ಆರೋಪಿ ಖುಲಾಸೆಗೊಂಡಿರುವ ಹಿನ್ನೆಲೆಯಲ್ಲಿ ಮರು ತನಿಖೆಗೆ ನೀಡಬೇಕೆಂದು ಆಗ್ರಹಿಸಿ ಇತ್ತೀಚೆಗೆ ಪ್ರತಿಭಟನೆಗಳು ನಡೆಯುತ್ತಿದ್ದವು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಶೇಷಾದ್ರಿಪುರದ ಗಿರೀಶ್ ಭಾರದ್ವಾಜ್, ಬೆಳ್ತಂಗಡಿಯ ಜಿ.ನವೀನ್ ಕುಮಾರ್ ಮತ್ತು ಬಲ್ವಾಡು ಪುತ್ತೂರಿನ ವಿನಾಯಕ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ, ಅರ್ಜಿದಾರರು ಎತ್ತಿರುವ ಮನವಿ ಕುರಿತು ಕಾನೂನಿನಡಿ ಲಭ್ಯವಿರುವ ಪರ್ಯಾಯ ವಿಧಾನಗಳ ಮೂಲಕ ಪರಿಹಾರ ಪಡೆಯಬಹುದು ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿದೆ. ವಿಚಾರಣೆ ವೇಳೆ ಅರ್ಜಿದಾರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದರು.








