ಮಹತ್ವದ ಬೆಳವಣಿಗೆಯೊಂದರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಶ್ರೀಲಂಕಾ ಕ್ರಿಕೆಟ್ ಮಂಡಳಿ(ಎಸ್‌ಎಲ್‌ಸಿ) ಸದಸ್ಯತ್ವವನ್ನ ತತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ.
ಭಾರತದಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಶ್ರೀಲಂಕಾ ತಂಡದ ಪ್ರದರ್ಶನ ಉತ್ತಮವಾಗಿರಲಿಲ್ಲ. ಇದರಿಂದಾಗಿ ಟೂರ್ನಿಯಲ್ಲಿ ಆಡಿದ 9 ಪಂದ್ಯಗಳಲ್ಲಿ ಎರಡು ಗೆಲುವು ಹಾಗೂ 7 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನ ಪಡೆಯುವ ಮೂಲಕ ತನ್ನ ವಿಶ್ವಕಪ್ ಅಭಿಯಾನ ಮುಗಿಸಿತ್ತು. ಈ ನಡುವೆ ತಂಡದ ಕಳಪೆ ಪ್ರದರ್ಶನದಿಂದ ಬೇಸತ್ತ ಶ್ರೀಲಂಕಾ ಸರ್ಕಾರ, ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನ ವಜಾಗೊಳಿಸಿತ್ತು.
ಶ್ರೀಲಂಕಾ ಕ್ರಿಕೆಟ್ ಮಂಡಳಿಯಲ್ಲಿನ ಎಲ್ಲಾ ಬೆಳವಣಿಗೆಗಳನ್ನ ಸೂಕ್ಷ್ಮವಾಗಿ ಗಮನಿಸಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ, ಇದೀಗ ಮಹತ್ವದ ನಿರ್ಧಾರವನ್ನ ಕೈಗೊಂಡಿದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಕಾರ್ಯಚಟುವಟಿಕೆಗಳಲ್ಲಿ ಸರ್ಕಾರದ ಹಸ್ತಕ್ಷೇಪ ಇರುವುದನ್ನ ಗಮನಿಸಿ ಐಸಿಸಿ ಈ ನಿರ್ಧಾರವನ್ನ ತೆಗೆದುಕೊಂಡಿದೆ. ಐಸಿಸಿಯ ಈ ನಿರ್ಧಾರದಿಂದ ತತಕ್ಷಣದಿಂದಲೇ ಜಾರಿಗೆ ಬರುವಂತೆ ಶ್ರೀಲಂಕಾ ಮಂಡಳಿಯ ಸದಸ್ಯತ್ವ ಅಮಾನತುಗೊಂಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಐಸಿಸಿ, ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಅಮಾನತುಗೊಳಿಸುವ ಷರತ್ತುಗಳನ್ನು ಐಸಿಸಿ ಮಂಡಳಿಯು ಸರಿಯಾದ ಸಮಯದಲ್ಲಿ ನಿರ್ಧರಿಸುತ್ತದೆ. ಐಸಿಸಿ ಮಂಡಳಿ ನವೆಂಬರ್ 21ರಂದು ಸಭೆ ಸೇರಲಿದ್ದು, ನಂತರ ಮುಂದಿನ ಕ್ರಮ ತೆಗೆದುಕೊಳ್ಳುವ ಬಗ್ಗೆ ಸ್ಪಷ್ಟತೆ ದೊರೆಯಲಿದೆ. ಮತ್ತೊಂದೆಡೆ ಶ್ರೀಲಂಕಾ ಮಂಡಳಿ 2024ರ ಜನವರಿ ಮತ್ತು ಫೆಬ್ರವರಿಯಲ್ಲಿ ICC ಅಂಡರ್-19 ಪುರುಷರ ಕ್ರಿಕೆಟ್ ವಿಶ್ವಕಪ್ ಅನ್ನು ಆಯೋಜಿಸುವ ಜವಾಬ್ದಾರಿ ಹೊತ್ತಿದೆ. ಒಂದೊಮ್ಮೆ ಐಸಿಸಿ ನಿರ್ಧಾರದಂತೆ ಶ್ರೀಲಂಕಾ ಮಂಡಳಿ ಅಮಾನತುಗೊಂಡಿದ್ದೇ ಆದಲ್ಲಿ ಈ ಪಂದ್ಯಾವಳಿ ಬೇರೆಡೆಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ.
ICC Board, Sri Lanka, International Cricket Council, World Cup