ಬೆಂಗಳೂರು : ನಾಳೆ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣ ಕಾಮಗಾರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಶಂಕುಸ್ಥಾಪನೆ ನೆರವೇರಲಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಂಪೇಗೌಡರ 511ನೇ ಜಯಂತಿ ಪ್ರಯುಕ್ತ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮುಂಭಾಗದಲ್ಲಿ ನಾಳೆ ಬೆಳಗ್ಗೆ 10.30ಕ್ಕೆ 23 ಎಕರೆ ಪ್ರದೇಶದಲ್ಲಿ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗುವುದು. 2021 ಕ್ಕೆ ಕೆಂಪೇಗೌಡರ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸುವ ಗುರಿಯನ್ನು ಹೊಂದಲಾಗಿದೆ ಎಂದು ಡಾ.ಅಶ್ವಥ್ ನಾರಾಯಣ ತಿಳಿಸಿದರು.
66 ಕೋಟಿ ಅನುದಾನ ಮೀಸಲು
ಪ್ರತಿಮೆ ನಿರ್ಮಾಣಕ್ಕಾಗಿ 66 ಕೋಟಿ ಅನುದಾನವನ್ನು ಮೀಸಲಿಡಲಾಗಿದ್ದು, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಯೋಜನೆಯ ಉಸ್ತುವಾರಿ ವಹಿಸಲಿದೆ. ವಿಕಾಸಸೌಧ ಹಾಗೂ ವಿಧಾನಸೌಧದ ಮಧ್ಯಭಾಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಪ್ರತಿಮೆಯನ್ನು ನಿರ್ಮಾಣ ಮಾಡಿದ ಖ್ಯಾತ ಶಿಲ್ಪಿ ರಾಮುಸತ ಅವರಿಗೆ ಒಂದು ವರ್ಷದೊಳಗೆ ಪೂರ್ಣಗೊಳಿಸಬೇಕೆಂಬ ಷರತ್ತಿನೊಂದಿಗೆ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಗುತ್ತಿಗೆ ನೀಡಲಾಗಿದೆ.
ಇನ್ನು ಈ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮಿ ಸೇರಿದಂತೆ ವಿವಿಧ ಮಠಗಳ ಶ್ರೀಗಳು, ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಸೇರಿದಂತೆ ಶಾಸಕರು, ಸಂಸದರು ಅನೇಕ ಗಣ್ಯರು ಭಾಗವಹಿಸಲಿದ್ದಾರೆ.








