ಬೆಂಗಳೂರು : ಇಂದು ಕೆಂಪೇಗೌಡ ಜಯಂತಿ ಹಿನ್ನೆಲೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನನಿಲ್ದಾಣದ ಬಳಿ ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ಹಾಗೂ ಸೆಂಟ್ರಲ್ ಪಾರ್ಕ್ ನಿರ್ಮಾಣಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ಗುದ್ದಲಿ ಪೂಜೆ ನೆರವೇರಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜೊತೆಗೆ ಸುತ್ತೂರು ಶ್ರೀಗಳು, ಆದಿಚುಂಚನಗಿರಿ ನಿರ್ಮಲಾನಂದನಾಥ ಶ್ರೀಗಳು ಹಾಗೂ ಸಿದ್ದಗಂಗಾ ಶ್ರೀಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಜೊತೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಗೋಪಾಲಯ್ಯ, ಬೈರತಿ ಬಸವರಾಜು, ಸಂಸದ ಬಚ್ಚೇಗೌಡ, ಶಾಸಕ ಶರತ್ ಬಚ್ಚೇಗೌಡ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಸಿಎಂ, ನಾವೆಲ್ಲಾ ಒಟ್ಟಾಗಿ ಸೇರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇವೆ. ಬೆಂಗಳೂರನ್ನು ಯೋಜನಾ ಬದ್ಧವಾಗಿ ಬೆಳೆಸಲು ಕೆಂಪೇಗೌಡರ ಕೊಡುಗೆ ಅಪಾರವಾಗಿದೆ. ನದಿ ಮೂಲ ಇಲ್ಲದ ಬೆಂಗಳೂರಿನಲ್ಲಿ ನೂರಾರು ಕೆರೆಗಳ ನಿರ್ಮಾಣ ಮಾಡಿದರು. ಬೆಂಗಳೂರು ನಗರವನ್ನು ಅತ್ಯಂತ ವೈಜ್ಞಾನಿಕವಾಗಿ ನಿರ್ಮಿಸಿದ್ದು ಕೆಂಪೇಗೌಡರು. ನಗರದ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳ ಅನುಷ್ಠಾನಕ್ಕೆ ನಮ್ಮ ಸರ್ಕಾರ ಶ್ರಮಿಸುತ್ತಿದೆ. ಮುಂದಿನ ಒಂದು ವರ್ಷದಲ್ಲಿ ಪ್ರತಿಮೆಯನ್ನು ನಿರ್ಮಿಸಿ ಅದರ ಉದ್ಘಾಟನೆಗೆ ಮತ್ತೆ ಎಲ್ಲರೂ ಸೇರೋಣ ಎಂದರು.