ಐಪಿಎಲ್ 13ನೇ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಗೆ ಬರೋಬ್ಬರಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
ವಿಶಾಖಪಟ್ಟಣದ ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಿತ್ತು. ಬೌಲಿಂಗ್ ವೇಳೆ ಸ್ಲೋ ಓವರ್ ರೇಟ್ ತಪ್ಪು ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ ಸಮಯದೊಳಗೆ ಪಂದ್ಯ ಮುಗಿಸಿರಲಿಲ್ಲ. ಈ ಕಾರಣಕ್ಕಾಗಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
ನಿಯಮದಂತೆ ಪ್ರತಿ ತಂಡಗಳು 20 ಓವರ್ ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣ ಮಾಡಬೇಕು. ಹೆಚ್ಚು ಸಮಯ ತೆಗೆದುಕೊಂಡರೆ ಬೌಂಡರಿ ಲೈನ್ನಿಂದ ಒಬ್ಬ ಫೀಲ್ಡರ್ನನ್ನು ಕಡಿತ ಮಾಡಲಾಗುತ್ತದೆ. ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.
ಇದೇ ತಪ್ಪು ಮತ್ತೆ ಆದರೆ, ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್ನ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ ಶೇ. 25 ದಂಡ ವಿಧಿಸಲಾಗುತ್ತದೆ.
ಮೂರನೇ ಬಾರಿ ತಪ್ಪು ನಡೆದರೆ, 30 ಲಕ್ಷ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಮೂರು ಬಾರಿ ತಪ್ಪು ಮಾಡಿದ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಇಲೆವೆನ್ನ 10 ಆಟಗಾರರಿಗೆ 12 ಲಕ್ಷ ಅಥವಾ ಪಂದ್ಯದ ಶುಲ್ಕದ ಶೇ. 50 ರಷ್ಟು ದಂಡ ಪಾವತಿಸಬೇಕಾಗುತ್ತದೆ. ಈಗ ರಿಷಬ್ ಪಂತ್ ಮೊದಲ ತಪ್ಪು ಮಾಡಿದ್ದಾರೆ.