ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದೆ. ಈ ಮೂಲಕ ಸತತ ಮೂರನೇ ಬಾರಿಗೆ ಪೆಮಾ ಖಂಡು (Pema Khandu) ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬುಧವಾರ ನಡೆದ ಸಭೆಯಲ್ಲಿ ಖಂಡು ಅವರನ್ನು ಬಿಜೆಪಿ (BJP) ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಮೂಲಕ ಹ್ಯಾಟ್ರಿಕ್ ಸಾಧನೆಗೆ ಅವಕಾಶ ಮಾಡಿಕೊಡಲಾಗಿದೆ.
ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯ ಹಿನ್ನೆಲೆಯಲ್ಲಿ ಬಿಜೆಪಿಯಿಂದ ರವಿಶಂಕರ್ ಪ್ರಸಾದ್ ಹಾಗೂ ತರುಣ್ ಚುಗ್ ವೀಕ್ಷಕರಾಗಿ ತೆರಳಿದ್ದರು. ಈ ಬಾರಿಯೂ ಶಾಸಕಾಂಗ ಪಕ್ಷದ ನಾಯಕರಾಗಿ ಖಂಡು ಅವರನ್ನು ಆಯ್ಕೆ ಮಾಡಿದ್ದಾರೆ. ಹೀಗಾಗಿ ಖಂಡು ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಗುರುವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
60 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿಯು 46 ಸ್ಥಾನಗಳಲ್ಲಿ ಗೆಲುವು ಕಂಡಿದೆ. ನ್ಯಾಷನಲ್ ಪೀಪಲ್ಸ್ ಪಾರ್ಟಿ 5, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ 3, ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ 2, ಕಾಂಗ್ರೆಸ್ 1 ಮತ್ತು ಪಕ್ಷೇತರ ಅಭ್ಯರ್ಥಿಗಳು 3ರಲ್ಲಿ ಗೆಲುವು ಸಾಧಿಸಿದ್ದರು.