ದಾವಣಗೆರೆ: ಆನಾರೋಗ್ಯಕ್ಕೆ ತುತ್ತಾಗಿದ್ದಕ್ಕೆ ಬೇಸತ್ತ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಜಿಲ್ಲೆಯ ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಷಣ್ಮುಖಪ್ಪ(65), ಇಂದ್ರಮ್ಮ(50) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಕೂಡಲೇ ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಯಿತು. ಆದರೆ, ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಈ ದಂಪತಿಗೆ ಮಕ್ಕಳಿರಲಿಲ್ಲ. ಆದರೆ, ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದರು. ಇಳಿ ವಯಸ್ಸಿನಲ್ಲಿ ನಮ್ಮ ಆರೈಕೆ ಮಾಡುವರು ಯಾರೆಂದು ಬೇಸತ್ತು ಇಬ್ಬರೂ ಕ್ರಿಮಿನಾಶಕ ಸೇವಿಸಿದ್ದಾರೆ. ವಿಚಾರ ತಿಳಿದ ಅಕ್ಕ-ಪಕ್ಕದ ಮನೆಯವರು ಕೂಡಲೇ ದಂಪತಿಯನ್ನು ಆಸ್ಪತ್ರೆಗೆ ಸೇರಿಸಲು ಯತ್ನಿಸಿದ್ದಾರೆ. ಈ ಕುರಿತು ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.