ಬೆಳಗಾವಿ: ಬಿಜೆಪಿಯಲ್ಲಿ ಮತ್ತೊಮ್ಮೆ ಭಿನ್ನಮತ ಜೋರಾಗಿದ್ದು, ರೆಬೆಲ್ ನಾಯಕರು ಬಳ್ಳಾರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಮೈಸೂರು ಪಾದಯಾತ್ರೆ ಸಮಾರೋಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮುಂದಾಳತ್ವ ವಹಿಸಿದ್ದರು. ಆದರೆ, ಹಲವರು ವಿಜಯೇಂದ್ರ ನಾಯಕತ್ವ ಒಪ್ಪಿಕೊಳ್ಳುತ್ತಿಲ್ಲ. ಹೀಗಾಗಿ ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದಾರೆ.
ಬಿಜೆಪಿ ಬಂಡಾಯ (BJP Rebels) ನಾಯಕರು ಬೆಳಗಾವಿಯಲ್ಲಿ (Belagavi) ಜಾಂಬೋಟಿ ರಸ್ತೆಯ ಖಾಸಗಿ ರೆಸಾರ್ಟ್ ನಲ್ಲಿ ಸಭೆ ನಡೆಸಿದ್ದರು. ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಸಭೆ ನಡೆದಿದೆ. ಈ ಸಭೆಯಲ್ಲಿ ಅರವಿಂದ ಲಿಂಬಾವಳಿ, ಜಿ.ಎಂ.ಸಿದ್ದೇಶ್ವರ, ಪ್ರತಾಪ್ ಸಿಂಹ, ಅಣ್ಣಾಸಾಹೇಬ್ ಜೊಲ್ಲೆ, ಕುಮಾರ ಬಂಗಾರಪ್ಪ, ಬಿಎಸ್ವೈ ಆಪ್ತ ಎನ್.ಆರ್.ಸಂತೋಷ್ ಸೇರಿದಂತೆ ಕೆಲವು ನಾಯಕರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಕೂಡಲಸಂಗಮದಿಂದ ಬಳ್ಳಾರಿಯವರೆಗೂ ಪಾದಯಾತ್ರೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 17ರಂದು ಅಥವಾ ದೀಪಾವಳಿ ನಂತರ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲು ಮುಹೂರ್ತ ಫಿಕ್ಸ್ ಮಾಡಲಾಗಿದೆ ಎನ್ನಲಾಗುತ್ತಿದೆ. ಆದರೆ, ಹೈಕಮಾಂಡ್ ಈ ನಿರ್ಧಾರಕ್ಕೆ ಏನು ಹೇಳಲಿದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.