ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆರ್ಭಟ ಮುಂದುವರಿದಿದ್ದು, ಜನರಲ್ಲಿ ಆತಂಕ ಹೆಚ್ಚಾಗುತ್ತಿದೆ. ಇದರ ಮಧ್ಯೆ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರಿಗೂ ಇದೀಗ ಕೊರೊನಾ ಬಿಸಿ ತಟ್ಟಿದೆ.
ದಿನೇಶ್ ಗುಂಡೂರಾವ್ ಅವರ ಭದ್ರತಾ ಸಿಬ್ಬಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಕಳೆದೆರಡು ದಿನಗಳ ಹಿಂದೆ ಭದ್ರತಾ ಸಿಬ್ಬಂದಿಗೆ ಕೋವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿತ್ತು. ನಿನ್ನೆ ವರದಿ ಬಂದಿದ್ದು, ಭದ್ರತಾ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ದಿನೇಶ್ ಗುಂಡೂರಾವ್ ಹಾಗೂ ಕುಟುಂಬ ಸದಸ್ಯರನ್ನು ವೈದ್ಯಕೀಯ ತಪಾಸಣೆ ನಡೆಸಲಾಗಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ತಮ್ಮ ಕುಟುಂಬದವರು ಕ್ವಾರಂಟೈನ್ ನಲ್ಲಿದ್ದು, ಯಾರಿಗೂ ಸೋಂಕಿನ ಲಕ್ಷಣಗಳಿಲ್ಲ ಎಂದು ತಿಳಿಸಿದ್ದಾರೆ. 








