ಬೆಂಗಳೂರು: ನಾವು ನುಡಿದಂತೆ ನಡೆಯತ್ತವೆ. ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿಯೇ ಈಡೇರಿಸುತ್ತೇವೆ. ಐದು ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯಾಗುತ್ತದೆ ಎಂಬ ಸುದ್ದಿಗಳು ಸುಳ್ಳು. ಅವುಗಳನ್ನು ರಾಜ್ಯದ ಜನರು ನಂಬಬಾರದು. ನಾವು ಮಾತು ಕೊಟ್ಟಂತೆ ಎಲ್ಲ ಯೋಜನೆಗಳು ಜನರಿಗೆ ಸಿಗುತ್ತವೆ ಎಂದು ಹೇಳಿದ್ದಾರೆ.
5 ಗ್ಯಾರಂಟಿಯಿಂದ ಮಾಸಿಕ 4 ರಿಂದ 5 ಸಾವಿರ ಪ್ರತಿ ಫಲಾನುಭವಿ ಕುಟುಂಬಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಲಾಭ ಸಿಗುತ್ತಿದೆ. ಈ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ರಾಜ್ಯದಲ್ಲಿ ಆರ್ಥಿಕ ಬೆಳವಣಿಗೆ ಸಾಧಿಸಿ ತೋರಿಸುವ ಮೂಲಕ ನಾವು ದಿಟ್ಟ ಉತ್ತರ ನೀಡಿದ್ದೇವೆ. ಐದು ಗ್ಯಾರಂಟಿ ಯೋಜನೆಗಳು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೇರ ಆರ್ಥಿಕ ನೆರವು ಸಿಗುತ್ತಿದೆ ಎಂದು ಹೇಳಿದ್ದಾರೆ.








