ಬೆಂಗಳೂರು: ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ (Karkala Kidnap) ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೊಂದು ಪೈಶಾಚಿಕ ಕೃತ್ಯ. ಇದನ್ನು ಖಂಡಿಸುತ್ತೇವೆ. ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ. ಅಲ್ಲದೇ ಸಂತ್ರಸ್ತೆಗೆ ಜಿಲ್ಲಾಡಳಿತ ಎಲ್ಲಾ ರೀತಿಯ ನೆರವು ಒದಗಿಸಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.
ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಪೊಲೀಸರಿಗೆ (Udupi Police) ದಿಟ್ಟತನದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಹಿಂದೆ ಯಾರೇ ಇದ್ದರೂ ಮುಲಾಜಿಲ್ಲದೇ ಬಂಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಯಾವುದೇ ಧರ್ಮದವರಾಗಲಿ ತಪ್ಪು ಮಾಡಿದರೆ, ತಕ್ಕ ಶಿಕ್ಷೆ ನೀಡುವುದಕ್ಕೆ ನಮ್ಮ ಪೊಲೀಸರಿಗೆ ಹಿಂಜರಿಕೆಯಿಲ್ಲ. ದಿಟ್ಟ ಕ್ರಮ ಕೈಗೊಳ್ಳಲಿದ್ದಾರೆ. ಇನ್ಮುಂದೆ ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರಕಳಿಸದಂತೆ ಮುನ್ನಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.