ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಇಂದು ಹಾಗೂ ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಹೀಗಾಗಿ ಇಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್, ಕಲಬುರಗಿ, ಬೆಳಗಾವಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಅಲ್ಲದೇ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿಯೂ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮತ್ತೆ ಮಳೆ ಆರಂಭವಾಗಿದ್ದು, ಹಗುರವಾದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.