ಬೆಂಗಳೂರು: ಮೀಸಲಾತಿ ವಿಷಯವಾಗಿ ಅಮೆರಿಕದಲ್ಲಿ ಮಾತನಾಡಿದ್ದ ರಾಹುಲ್ ಹೇಳಿಕೆ ವಿರೋಧಿಸಿ ಬಿಜೆಪಿ ವತಿಯಿಂದ ರಾಜ್ಯದಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಆದರೆ, ಇದಕ್ಕೆ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿಯವರು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಮೀಸಲಾತಿ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ್ದಾರೆ. ಬಿಜೆಪಿಯವರ ಪ್ರತಿಭಟನೆ ಪ್ರಾಣಿ ಹಿಂಸೆ ವಿರುದ್ಧ ಕಟುಕರು ಪ್ರತಿಭಟನೆ ಮಾಡಿದಂತೆ. ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರಿಗೆ, ಸಂವಿಧಾನವನ್ನೇ ಬದಲಾಯಿಸಲು ಹೊರಟವರಿಗೆ ಇಂತಹ ಪ್ರತಿಭಟನೆ ಮಾಡುವ ಯಾವ ನೈತಿಕತೆ ಇದೆಯಾ? ಎಂದು ವಾಗ್ದಾಳಿ ನಡೆಸಿದ್ದಾರೆ.
ವಿದ್ಯೆ, ಉದ್ಯೋಗ ಮತ್ತು ಅವಕಾಶಗಳಲ್ಲಿ ಸರ್ವರಿಗೂ ಸಮಾನ ಪಾಲನ್ನು ನೀಡುವುದೇ ಮೀಸಲಾತಿಯ ಮೂಲ ಉದ್ದೇಶವಾಗಿದೆ. ಆ ಉದ್ದೇಶ ಸಾಧನೆಯಾದ ನಂತರ ಮೀಸಲಾತಿ ಯಾಕೆ ಬೇಕು? ಇದನ್ನು ರಾಹುಲ್ ಗಾಂಧಿಯವರು ಮಾತ್ರ ಅಲ್ಲ ನಾನೂ ಹೇಳುತ್ತೇನೆ.
ಇದು ಹೇಗೆ ಮೀಸಲಾತಿ ವಿರೋಧಿ ಹೇಳಿಕೆ ಆಗುತ್ತದೆ? ಸರ್ವರಿಗೂ ಶಿಕ್ಷಣ, ಉದ್ಯೋಗ ಮತ್ತು ಅವಕಾಶಗಳಲ್ಲಿ ಸಮಾನ ಪಾಲು ಸಿಗಬೇಕೆಂಬ ಉದ್ದೇಶದಿಂದಲೇ ಬಾಬಾ ಸಾಹೇಬ್ ಅಂಬೇಡ್ಕರ್ (Baba Saheb Ambedkar) ಅವರು ಮೀಸಲಾತಿ ನೀತಿ ಅಳವಡಿಸಿದ್ದರು. ಆದರೆ ಮೀಸಲಾತಿಯ ಹೊರತಾಗಿಯೂ ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ಜಾತಿಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಸಮಾನ ಅವಕಾಶ ಇನ್ನೂ ಸಿಕ್ಕಿಲ್ಲ. ಸಾಮಾಜಿಕ ಅಸಮಾನತೆ ಕಡಿಮೆಯಾಗಿಲ್ಲ. ಇದಕ್ಕೆ ಬಿಜೆಪಿ ನಾಯಕರಂತಹ ಜಾತಿ ಪಟ್ಟಭದ್ರರು ಕಾರಣ ಎನ್ನುವುದು ಗೋಡೆ ಬರಹದಷ್ಟು ಸ್ಪಷ್ಟ ಎಂದು ಹೇಳಿದ್ದಾರೆ.
ಬಿಜೆಪಿಯ ಮಾತೃ ಸಂಸ್ಥೆಯಾದ ಆರ್‌ಎಸ್‌ಎಸ್ (RSS) ಹುಟ್ಟಿನಿಂದಲೇ ವರ್ಣವ್ಯವಸ್ಥೆಯನ್ನು ಸಮರ್ಥಿಸಿಕೊಂಡು ಬಂದಿರುವುದಕ್ಕೆ ಇತಿಹಾಸವೇ ಸಾಕ್ಷಿ ಎಂದು ಗುಡುಗಿದ್ದಾರೆ.