ಬೆಂಗಳೂರು: ಶಾಸಕ ಮುನಿರತ್ನ (Munirathna) ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಅವರು ಜೈಲಿಗೆ ಹೋಗುತ್ತಿದ್ದಂತೆ ಅವರ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಹೀಗಾಗಿ ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನು ಸಿಗುತ್ತಿದ್ದಂತೆ ಅತ್ಯಾಚಾರ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು.
ಕಗ್ಗಲಿಪುರ ಪೊಲೀಸರು ಮುನಿರತ್ನ ಅವರನ್ನು ವಶಕ್ಕೆ ಪಡೆದಿದ್ದಾರೆ. ಮಾಗಡಿ ಡಿವೈಎಸ್ಪಿ ಪ್ರವೀಣ್ ಹಾಗೂ ರಾಮನಗರ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದ ತಂಡದಿಂದ ಅರೆಸ್ಟ್ ಮಾಡಲಾಗಿತ್ತು. ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಬುಧವಾರ ಸಂಜೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.
ಕಗ್ಗಲೀಪುರದ ಖಾಸಗಿ ರೆಸಾರ್ಟ್ ನಲ್ಲಿ ಅತ್ಯಾಚಾರ ನಡೆಸಿರುವುದಾಗಿ 40 ವರ್ಷ ವಯಸ್ಸಿನ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಸದ್ಯ ಪ್ರಕರಣದ ತನಿಖೆಯನ್ನು ಸರ್ಕಾರ ಎಸ್ ಐಟಿಗೆ ವಹಿಸಿದೆ.