ಅಂಗನವಾಡಿ ಮೇಲ್ಛಾವಣಿ ಕುಸಿದ ಪರಿಣಾಮ ಮಕ್ಕಳು ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ 6ನೇ ವಾರ್ಡ್ ನ ಮೆಹಬೂಬ್ ನಗರದ 11ನೇ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.
ಅಂಗನವಾಡಿಯಲ್ಲಿ ಸುಮಾರು 20ಕ್ಕೂ ಅಧಿಕ ಮಕ್ಕಳು ಇದ್ದ ಸಂದರ್ಭದಲ್ಲಿ ಏಕಾಏಕಿ ಮೇಲ್ಛಾವಣಿ ಕುಸಿದು ಬಿದ್ದಿದೆ. ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಮಕ್ಕಳ ತಲೆ ಮತ್ತು ಕಾಲುಗಳಿಗೆ ಗಾಯಗಳಾಗಿವೆ. ಅಮನ್, ಮನ್ವಿತ್, ಮರ್ದನ್, ಸುರಕ್ಷಾ ಗಾಯಗೊಂಡ ಮಕ್ಕಳು ಎನ್ನಲಾಗಿದೆ. ಮಕ್ಕಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಸ್ಥಳಕ್ಕೆ ನಗರಸಭೆ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕಟ್ಟಡವನ್ನು ಸುಮಾರು 7 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿತ್ತು. ಆದರೆ, ಈಗ ಏಕಾಏಕಿ ಮೇಲ್ಛಾವಣಿ ಕುಸಿದಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.







