ಬೆಂಗಳೂರು : ಕೋವಿಡ್ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌಧಕ್ಕೆ ಬಂದು ಚರ್ಚೆ ಮಾಡಲಿ. ನಾವು ಕೂಡ ಅಲ್ಲಿಯೇ ಎಲ್ಲದಕ್ಕೂ ಉತ್ತರ ಕೊಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ..
ಬೆಂಗಳೂರಿನಲ್ಲಿ ಕೊರೊನಾ ಹೆಸರಲ್ಲಿ ಸರ್ಕಾರ ಹಣ ಲೂಟಿ ಹೊಡೆದಿದೆ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಖರೀದಿ ಮಾಡಿರುವ ಉಪಕರಣಗಳಲ್ಲಿ ಭ್ರಷ್ಟಾಚಾರ ಇಲ್ಲವೇ ಅವ್ಯವಹಾರ ನಡೆದಿರುವುದು ಸಾಬೀತಾದರೆ ಅಧಿಕಾರಿಗಳು ಸೇರಿದಂತೆ ಯಾರೇ ಇದ್ದರೂ ಅವರ ಮೇಲೆ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.
ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಂಕಿ ಅಂಶಗಳನ್ನು ನೋಡಿಕೊಂಡು ಮಾತನಾಡಬೇಕು. ಅವರಿಗೆ ದಾಖಲೆಗಳು ಬೇಕಿದ್ದರೆ ಅಧಿಕಾರಿಗಳು ನೀಡುತ್ತಾರೆ. ಅದನ್ನು ನೋಡಿ ಮಾತನಾಡಲಿ. ದಾಖಲೆಗಳಿಲ್ಲದೆ ಸುಖಾಸುಮ್ಮನೆ ಆರೋಪ ಮಾಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದ ಬಿಎಸ್ ವೈ, ಒಂದು ವೇಳೆ ಖರೀದಿಯಲ್ಲಿ ವ್ಯತ್ಯಾಸ ಕಂಡುಬಂದರೆ ಅಂಥವರ ಮೇಲೆ ಶಿಸ್ತುಕ್ರಮ ಜರುಗಿಸುತ್ತೇನೆ. ನಮ್ಮಲ್ಲಿ ಯಾವುದಾದರೂ ಲೋಪಗಳಿದ್ದರೆ ಸರ್ಕಾರಕ್ಕೆ ಸಲಹೆ ನೀಡಲಿ. ಆದರೆ ಸುಳ್ಳು ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದರು.
ನಾನು ಇದುವರೆಗೂ ಸಿದ್ದರಾಮಯ್ಯ ಅವರ ಟೀಕೆಗಳಿಗೆ ಉತ್ತರಿಸಬಾರದೆಂದು ಸುಮ್ಮನಿದ್ದೆ. ಆದರೆ ಆಧಾರರಹಿತವಾಗಿ ಆರೋಪ ಮಾಡಿರುವುದಕ್ಕೆ ಪ್ರತಿಕ್ರಿಯಿಸಬೇಕಾಯಿತು ಎಂದು ಗುಡುಗಿದರು.








