ಬೆಳಗಾವಿ: ದಸರಾ (Mysuru Dasara) ಮೆರವಣಿಗೆಯಲ್ಲಿ ಕಳಂಕಿತ ಸಿಎಂ ಭಾಗಿಯಾಗಿದ್ದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ (P Rajeev) ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ (MUDA Scam) ಮೇಲೆ ಆರೋಪ ಬಂದಾಗ ಸ್ಪಷ್ಟವಾಗಿ ನಿರಾಕರಣೆ ಮಾಡಿದ್ದರು. ರಾಜ್ಯಪಾಲರು ಪ್ರಾಸಿಕ್ಯೂಷನ್ ನೀಡಿದ ಮೇಲೆ ಕಾಂಗ್ರೆಸ್ನ ಎಲ್ಲಾ ಮುಖಂಡರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ನ್ಯಾಯಾಲಯಕ್ಕೂ ಹಗರಣ ನಡೆದಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಹೀಗಾಗಿ ಅವರು ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಇದ್ದಾಗ ಸಿದ್ದರಾಮಯ್ಯ ವಿರುದ್ಧ 60ಕ್ಕೂ ಅಧಿಕ ಲೋಕಾಯುಕ್ತದಲ್ಲಿ ಕೇಸ್ ದಾಖಲಾಗಿವೆ. ಕೇಸ್ ದಾಖಲಾಗಿದ್ದಕ್ಕೆ ಲೋಕಾಯುಕ್ತ ತನಿಖಾ ಸಂಸ್ಥೆ ಬಂದ್ ಮಾಡಿಸಿದ್ದರು. ರಾಜ್ಯ ಭ್ರಷ್ಟಾಚಾರದಲ್ಲಿ ಮುಳುಗಿ ಅಭಿವೃದ್ಧಿ ಕುಂಠಿತವಾಗಿದೆ. ರಾಜ್ಯದಲ್ಲಿ ಕಳೆದ ನಾಲ್ಕು ತಿಂಗಳಿಂದ ಗೃಹಲಕ್ಷ್ಮಿ ಹಣ ಬರೋದು ತಪ್ಪಿದೆ. ಮತ್ತೆ ಲೂಟಿ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.