ನವದೆಹಲಿ: ಮುಡಾ ಪ್ರಕರಣದಲ್ಲಿ (MUDA Scam) ಸಿಎಂ ರಾಜೀನಾಮೆಗೆ (CM Siddaramaiah) ವಿಪಕ್ಷಗಳು ಪಟ್ಟು ಹಿಡಿದಿವೆ. ಈ ಮಧ್ಯೆ ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್ ನಲ್ಲಿ ಕೆಲವರು ಕಣ್ಣಿಟ್ಟಿದ್ದಾರೆ. ಆದರೆ, ಸಿದ್ದರಾಮಯ್ಯ ಮಾತ್ರ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಸಚಿವ ಸತೀಶ ಜಾರಕಿಹೊಳಿ ಅವರು ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಅವರನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarakholi) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದಲಿತ ಸಚಿವರೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಜಾರಕಿಹೊಳಿ ಹಾಗೂ ಖರ್ಗೆ ಭೇಟಿಯು ಹೆಚ್ಚಿನ ಮಹತ್ವ ಪಡೆದಿದೆ. ಹೀಗಾಗಿ ಹಲವರು ಹಲವಾರು ರೀತಿಯಲ್ಲಿ ಮಾತನಾಡುತ್ತಿದ್ದಾರೆ.
ದೆಹಲಿಯಲ್ಲಿ (Delhi) ಮಲ್ಲಿಕಾರ್ಜುನ್ ಖರ್ಗೆ ನಿವಾಸದಲ್ಲಿ ಭೇಟಿಯಾಗಿರುವ ಸತೀಶ್ ಜಾರಕಿಹೊಳಿ, ಪ್ರಸಕ್ತ ರಾಜಕೀಯ ಬೆಳವಣಿಗೆ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಮುಡಾ ಪ್ರಕರಣದಲ್ಲಿ ನಾವು ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದೇವೆ. ಪ್ರತಿ ಹಂತದಲ್ಲೂ ನಾವು ಸಮರ್ಥಿಸಿಕೊಳ್ಳುತ್ತಿದ್ದೇವೆ ಎಂದಿದ್ದಾರೆ.
ಒಂದು ವೇಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಸಂದರ್ಭ ಎದುರಾದರೆ, ಎಸ್ಸಿ ಅಥವಾ ಎಸ್ಟಿ ನಾಯಕರಿಗೆ ಸಿಎಂ ಸ್ಥಾನ ಸಿಗಬೇಕು ಎಂಬ ನಿಟ್ಟಿನಲ್ಲಿ ಚರ್ಚೆ ನಡೆಸಲಾಗುತ್ತಿದೆ ಎಂದು ಕೂಡ ತಿಳಿದು ಬಂದಿದೆ.