ಮೈಸೂರು: ಇತ್ತೀಚೆಗಷ್ಟೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದ ಸಚಿವ ಸತೀಶ್ ಜಾರಕಿಹೊಳಿ ಈಗ ಸಿಎಂ ಆಪ್ತ ಸಚಿವ (CM Personal Secretary) ಡಾ.ಹೆಚ್.ಸಿ ಮಹದೇವಪ್ಪ (HC Mahadevappa) ಅವರನ್ನು ಭೇಟಿಯಾಗಿದ್ದಾರೆ. ಹೀಗಾಗಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದ ಚರ್ಚೆ ಶುರುವಾಗಿದೆ.
ದೆಹಲಿ (Delhi) ಭೇಟಿ ನಂತರ ರಾಜ್ಯ ನಾಯಕರುಗಳನ್ನು ಕೂಡ ಸತೀಶ ಜಾರಕಿಹೊಳಿ ಭೇಟಿ ಮಾಡಿದ್ದಾರೆ. ಮೈಸೂರಿನಲ್ಲಿ ಮಹದೇವಪ್ಪ, ಶಾಸಕ ಹರೀಶ್ ಗೌಡ ಸೇರಿದಂತೆ ಹಲವು ಶಾಸಕರನ್ನು ಸತೀಶ ಜಾರಕಿಹೊಳಿ ಭೇಟಿ ಮಾಡಿದ್ದಾರೆ. ಈ ಸುದ್ದಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ನಮ್ಮ ಸಿಎಂ. ಇದರಲ್ಲಿ ಬೇರೆ ಯಾವುದೇ ಪ್ರಶ್ನೆ ಇಲ್ಲ. ನಾನು ಅವರ ಜೊತೆಯಲ್ಲಿ ಸಚಿವನಾಗಿ ಕೆಲಸ ಮಾಡುತ್ತೇನೆ. ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ. ಆ ರೀತಿಯ ಯಾವುದೇ ಚರ್ಚೆಗಳೂ ನಡೆದಿಲ್ಲ. ವಿಪಕ್ಷಗಳು, ಮಾಧ್ಯಮಗಳು, ಚರ್ಚೆ ಮಾಡುತ್ತಿವೆ. ವಿಪಕ್ಷ ನಾಯಕರು ಪ್ರೀತಿಯಿಂದ ನಮ್ಮ ಹೆಸರು ಹೇಳುತ್ತಿದ್ದಾರೆ ಅಷ್ಟೇ ಎಂದಿದ್ದಾರೆ.
ಡಿಕೆಶಿ ವಿಚಾರ, ಮತ್ತೊಬ್ಬರ ವಿಚಾರ ನನಗೆ ಹೇಳಲು ಆಗುವುದಿಲ್ಲ. ರಾಜಕಾರಣಿಗಳು ಸೇರಿದಾಗ ರಾಜಕಾರಣದ ಬಗ್ಗೆ ಚರ್ಚೆ ಮಾಡುತ್ತೇವೆ. ಅದರಲ್ಲಿ ವಿಶೇಷವೇನೂ ಇಲ್ಲ. ಇವತ್ತಿನ ಭೇಟಿಯ ಹಿಂದೆಯೂ ವಿಶೇಷತೆ ಇಲ್ಲ ಎಂದಿದ್ದಾರೆ.








