ಮುಂಬೈ: ಖ್ಯಾತ ಉದ್ಯಮಿ ರತನ್ ಟಾಟಾ (Ratan Tata) ಅವರ ಅಂತ್ಯಕ್ರಿಯೆಯನ್ನು (Funeral) ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (Eknath Shinde) ಹೇಳಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಮುಂಬೈನ (Mumbai) ಬ್ರೀಚ್ ಕಾಂಡಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿರುವ ರತನ್ ಟಾಟಾ ಅವರ ಸಾವಿಗೆ ಇಡೀ ಲೋಕ ಕಂಬನಿ ಮಿಡಿಯುತ್ತಿದೆ. ಗಣ್ಯರು, ರಾಜಕಾರಣಿಗಳು ರತನ್ ಟಾಟಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಈ ಕುರಿತು ಪೋಸ್ಟ್ ಮಾಡಿ, ಟಾಟಾ ಅವರಿಗೆ ಗೌರವ ಸಲ್ಲಿಸುವ ಹಿನ್ನೆಲೆಯಲ್ಲಿ ಗುರುವಾರ ಮಹಾರಾಷ್ಟ್ರದಲ್ಲಿ ಶೋಕಾಚರಣೆ ನಡೆಸಲಾಗುತ್ತದೆ. ಗೌರವ ಸೂಚಕವಾಗಿ ಮಹಾರಾಷ್ಟ್ರದ ಸರ್ಕಾರಿ ಕಚೇರಿಗಳಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು. ಇಂದು ನಿಗದಿಯಾಗಿದ್ದ ಮನರಂಜನಾ ಕಾರ್ಯಕ್ರಮ ರದ್ದುಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಟಾಟಾ ಅವರ ಪಾರ್ಥಿವ ಶರೀರವನ್ನು ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್‌ನಲ್ಲಿ (NCPA) ಬೆಳಗ್ಗೆ 10 ಗಂಟೆಯಿಂದ ಸಂಜೆ 4ರ ವರೆಗೆ ಇರಿಸಲಾಗುವುದು. ಜನರು ಅಂತಿಮ ನಮನ ಸಲ್ಲಿಸಬಹುದು. ಬಳಿಕ ವರ್ಲಿ ಪ್ರದೇಶದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.








