ಬೆಂಗಳೂರು: ತಳ ಸಮುದಾಯದವರು ಸಂಸ್ಕೃತ ಕಲಿತು ಕಾವ್ಯ ರಚಿಸಿದರೆ ಅವರ ಬಗ್ಗೆ ಸುಳ್ಳು ಕತೆ ಕಟ್ಟುತ್ತಾರೆ ಎಂದು ಮಹರ್ಷಿ ವಾಲ್ಮೀಕಿ ಬಗೆಗಿನ ಸುಳ್ಳು ಮಾಹಿತಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತ ಬರೆದ ವ್ಯಾಸರು ಬೆಸ್ತರು. ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರು. ದರೋಡೆ ಮಾಡಿಕೊಂಡು ಓಡಾಡುತ್ತಿದ್ದ ವಾಲ್ಮೀಕಿ (Valmiki Jayanti) ರಾಮಾಯಣ ಬರೆಯಲು ಸಾಧ್ಯವಾ ಎಂದು ಕತೆ ಕಟ್ಟುತ್ತಾರೆ. ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥಾ ಹೊತ್ತಲ್ಲೇ ಸಂಸ್ಕೃತ ಕಲಿತು ಶ್ಲೋಕಗಳ ಮೂಲಕ ಜಗತ್ಪ್ರಸಿದ್ಧ ರಾಮಾಯಣ ಮಹಾಕಾವ್ಯ ಬರೆದರಲ್ಲಾ ಇದು ಹೆಮ್ಮೆಯ ಸಂಗತಿ ಎಂದು ಹೇಳಿದ್ದಾರೆ.
ರಾಮನ ಮಕ್ಕಳಾದ ಲವ-ಕುಶರಿಗೆ ಆಶ್ರಯ ನೀಡಿ ಶಿಕ್ಷಣ ಕೊಟ್ಟಿದ್ದು ವಾಲ್ಮೀಕಿ ಮಹರ್ಷಿಗಳು. ವಾಲ್ಮೀಕಿ ವಿಶ್ವಮಾನವರಾಗಿದ್ದರು ಎನ್ನುವುದಕ್ಕೆ ಇದು ಉದಾಹರಣೆ ಎಂದರು. ಈ ವೇಳೆ ಐವರು ಸಾಧಕರನ್ನು ಸನ್ಮಾನಿಸಲಾಯಿತು.