ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Bengaluru Rains) ಕಳೆದ ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಜನ – ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಈ ಮಧ್ಯೆ ಮಳೆಗೆ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.
ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿದಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದು, ಶವಗಳನ್ನು ಹೊರತೆಗೆಯಲಾಗಿದೆ.
ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಳೆಯ ಮಧ್ಯೆಯೂ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಸ್ಥಳೀಯ ಶಾಸಕ ಬೈರತಿ ಸುರೇಶ್ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








