ಮುಂಬಯಿ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ (Salman Khan) ಮತ್ತೊಮ್ಮೆ ಜೀವ ಬೆದರಿಕೆ ಹಾಕಲಾಗಿದೆ. ಈ ಬಾರಿಯೂ ಅದೇ ಗ್ಯಾಂಗ್ ಬೆದರಿಕೆ ಹಾಕಿದೆ.
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಮತ್ತೊಮ್ಮೆ ಬೆದರಿಕೆ ಕರೆ ಬಂದಿದೆ ಎಂದು ಮುಂಬಯಿ ಪೊಲೀಸರು ಹೇಳಿದ್ದಾರೆ. ಗುರುವಾರ ರಾತ್ರಿ ಮುಂಬಯಿ ಸಂಚಾರ ಪೊಲೀಸರ ವಾಟ್ಸಾಪ್ ಸಹಾಯವಾಣಿಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸಂದೇಶ ಕಳುಹಿಸಿದವರು ನಟನಿಗೆ ಬೆದರಿಕೆ ಹಾಕಿ 5 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಇದನ್ನು ಬಿಷ್ಣೋಯ್ ಗ್ಯಾಂಗ್ ಪರವಾಗಿ ಮಾಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ. ‘ಮೈ ಸಿಕಂದರ್ ಹೂನ್’ ಹಾಡಿನ ಗೀತರಚನೆಕಾರನಿಗೂ ಬೆದರಿಕೆ ಹಾಕಿದ್ದಾನೆ ಎಂದು ಅಧಿಕಾರಿ ಹೇಳಿದ್ದಾರೆ.
ಹೀಗಾಗಿ ಸಂಚಾರ ಅಧಿಕಾರಿಗಳ ದೂರಿನ ಹಿನ್ನೆಲೆಯಲ್ಲಿ ವರ್ಲಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕಳೆದ ಕೆಲವು ವಾರಗಳಲ್ಲಿ, ಟ್ರಾಫಿಕ್ ಪೊಲೀಸ್ ಸಹಾಯವಾಣಿಗೆ ಸಲ್ಮಾನ್ ಖಾನ್ಗೆ ಹಲವು ಬೆದರಿಕೆ ಸಂದೇಶಗಳು ಬಂದಿವೆ.
ಕೊಲೆ ಯತ್ನ ಮತ್ತು ಸುಲಿಗೆ ಸೇರಿದಂತೆ ಕೆಲವು ಪ್ರಕರಣಗಳಲ್ಲಿ ಬಿಷ್ಣೋಯ್ ಈಗಾಗಲೇ ಜೈಲಿನಲ್ಲಿದ್ದಾನೆ. ಆದರೆ, ಆತನ ತಂಡದಿಂದ ಮಾತ್ರ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಲಾಗುತ್ತಿದೆ.