ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಜಾಮೀನಿಗಾಗಿ ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಜಾಮೀನು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್ (Karnataka Highcour) ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ (Supreme Court) ಮೇಲ್ಮನವಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನ. 11ರಂದು ನಡೆಯಲಿದೆ ಎನ್ನಲಾಗುತ್ತಿದೆ. ಅಕ್ಟೋಬರ್ 21ರಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಪ್ರಜ್ವಲ್ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು (Bail) ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್ನಲ್ಲಿ ದಾಖಲಾಗಿದ್ದ 2 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿ ವಜಾಗೊಳಿಸಿತ್ತು. ಹೀಗಾಗಿ ಪ್ರಜ್ವಲ್ ಗೆ ಜೈಲು ಗತಿ ಎನ್ನುವಂತಾಗಿತ್ತು. ಈಗ ಜಾಮೀನಿಗಾಗಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ.