ಬೆಂಗಳೂರು: ಸೇವಾ ಖಾಯಂ ಮಾಡಬೇಕು, ಇಲ್ಲದೇ ಹೋದರೆ ನಾಳೆಯಿಂದ ವೈದ್ಯ ಸೇವೆ ಸ್ಥಗಿತಗೊಳಿಸುವುದಾಗಿ ಗಡುವು ನೀಡಿದ್ದ ಸರ್ಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ವೈದ್ಯರಿಗೆ ಸಿಹಿ ಸಿಗುತ್ತಾ ಎಂಬುದು ಕೆಲವೇ ಗಂಟೆಗಳಲ್ಲಿ ಗೊತ್ತಾಗಲಿದೆ.

ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ವೈದ್ಯರ ಪೈಕಿ 600 ಗುತ್ತಿಗೆ ವೈದ್ಯರನ್ನು ಕಾಯಂ ಮಾಡುವ ಕುರಿತು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಚಿವ ಶ್ರೀರಾಮುಲು, ರಾಜ್ಯದಲ್ಲಿ ಗುತ್ತಿಗೆ ವೈದ್ಯರು ಕೊರೊನಾ ವೈರಸ್ ಸಮಯದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದು, ಸದ್ಯ ಅವರು ಕಾಯಂ ಮಾಡುವಂತೆ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. 600 ಗುತ್ತಿಗೆ ವೈದ್ಯರನ್ನು ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ. ಉಳಿದ ಗುತ್ತಿಗೆ ವೈದ್ಯರ ಖಾಯಂ ಮಾಡುವ ಕುರಿತು ಇಂದು ಸಂಜೆ 4 ಗಂಟೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯ ಬಳಿಕ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ನಡೆಸಲಿರುವ ಸಭೆ ಭಾರಿ ಮಹತ್ವ ಪಡೆದುಕೊಂಡಿದೆ. ಒಂದು ವೇಳೆ ಸರ್ಕಾರ ವೈದ್ಯರ ಬೇಡಿಕೆ ಈಡೇರಿಸದೇ ಹೋದರೆ ನಾಳೆಯಿಂದ ಕೊರೊನಾ ಚಿಕಿತ್ಸೆ ಮೇಲೆ ಗಂಭೀರ ಪರಿಣಾಮ ಬೀಳುವ ಸಾಧ್ಯತೆ ಇದೆ.








