ಬೀದರ್: ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿಯಾಗಿದ್ದಾರೆಂದು ಆರೋಪಿಸಿ, ಕುಟುಂಬಸ್ಥರು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ಈ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದಿದೆ. ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿಲ್ಲ. ಹೀಗಾಗಿ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಹಾಗೂ ಸಂಬಂಧಿಕರು ಆರೋಪಿಸಿದ್ದಾರೆ.
ನಾಗಮ್ಮ ನರಸಪ್ಪ (63) ಸಾವನ್ನಪ್ಪಿರುವ ಮಹಿಳೆ. ಮಹಿಳೆಯ ಸಾವಿನ ಸುದ್ದಿ ಕೇಳಿ ಆಸ್ಪತ್ರೆ ಎದುರು ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿತ್ತು. ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ.
ಘಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಜ್ಞಾನೇಶ್ವರ್ ನಿರಗುಡೆ ಭೇಟಿ ನೀಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಈ ಕುರಿತು ಹಳ್ಳಿಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.








