2025ರ ಫೆಬ್ರವರಿ 19 ರಿಂದ ಮಾರ್ಚ್ 9ರ ವರೆಗೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ (Champions Trophy 2025)ಯ ಗುದ್ದಾಟ ಇನ್ನೂ ಮುಗಿದಿಲ್ಲ. ಈ ಮಧ್ಯೆ ಈ ವಾರದಲ್ಲೇ ಟೂರ್ನಿಯ ವೇಳಾಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಈಗಾಗಲೇ ಭಾರತ ತಂಡವು ಪಾಕ್ ಗೆ ಹೋಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಪಾಕ್ ಕೂಡ ಮೊಂಡಾಟ ನಡೆಸುತ್ತಿದ್ದು, ಪಾಕ್ ಗೆ ಬರುವಂತೆ ಆಹ್ವಾನ ನೀಡುತ್ತಿದೆ. ಹೈಬ್ರಿಡ್ ಮಾದರಿಯಲ್ಲಿ ಪಂದ್ಯ ಆಯೋಜಿಸುವುದಿಲ್ಲ ಎಂದು ಹೇಳಿದೆ. ಹೀಗಾಗಿ ಇನ್ನೂ ಹಗ್ಗ ಜಗ್ಗಾಟ ನಡೆಯುತ್ತಿದೆ.
ಪಿಸಿಬಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ಉತ್ಸುಕವಾಗಿಲ್ಲ. ಚಾಂಪಿಯನ್ಸ್ ಟ್ರೋಫಿ ವಿಚಾರದಲ್ಲಿ ಐಸಿಸಿ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ. ಟ್ರೋಫಿ ಆಯೋಜಿಸುವ ಸಲುವಾಗಿ ಕರಾಚಿ, ಲಾಹೋರ್ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳನ್ನು ನವೀಕರಿಸಲು ಪಾಕಿಸ್ತಾನವು 17 ಶತಕೋಟಿ ರೂ.ಗಳನ್ನ (ಪಾಕಿಸ್ತಾನ ರೂಪಾಯಿ) ವಿನಿಯೋಗಿಸಿದೆ. ಅಲ್ಲದೇ ಇದು ಪಾಕಿಸ್ತಾನದ ಪ್ರತಿಷ್ಠೆಯಾಗಿದ್ದು, ಭಾರತ ತಂಡಕ್ಕಾಗಿ ಎದುರು ನೋಡುತ್ತಿದ್ದೇವೆ ಎಂದು ಪಿಸಿಬಿ ಮುಖ್ಯಸ್ಥರು ಹೇಳಿದ್ದಾರೆ.
ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡವು ಪಾಕಿಸ್ತಾನಕ್ಕೆ (Pakistan) ಬರುವುದಿಲ್ಲ ಎಂದು ಬಿಸಿಸಿಐ ಹೇಳಿದೆ. ಆದರೆ, ಐಸಿಸಿ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.