ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಹೈಕೋರ್ಟ್ ಮಂಜೂರು ಮಾಡಿದ್ದ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಮೇಲ್ಮನವಿ ಸಲ್ಲಿಸಲಾಗಿದೆ.
ಪ್ರಾಸಿಕ್ಯೂಷನ್ ಪರವಾಗಿ ವಕೀಲರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿರುವ ಷರತ್ತುಬದ್ಧ ಮಧ್ಯಂತರ ಜಾಮೀನು ರದ್ದು ಮಾಡುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಡಿ.6 ಅಥವಾ ಡಿ.9ರಂದು ಅರ್ಜಿಯು ವಿಚಾರಣೆಗೆ ಬರುವ ಸಾಧ್ಯತೆಯಿದೆ.
ಕೊಲೆ ಪ್ರಕರಣದ ಆರೋಪದಲ್ಲಿ ದರ್ಶನ್ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾಗ ವಿಶೇಷ ಆತಿಥ್ಯ ಪಡೆದಿದ್ದ ಆರೋಪ ಮೇಲೆ ದರ್ಶನ್ ರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿತ್ತು. ಜೈಲಿನಲ್ಲಿದ್ದ ಅವಧಿಯಲ್ಲಿ ದರ್ಶನ್ ಅವರಿಗೆ ಬೆನ್ನು ನೋವು ಕಾಣಿಸಿಕೊಂಡು, ವೈದ್ಯಕೀಯ ಚಿಕಿತ್ಸೆಗೆ ಜಾಮೀನು ನೀಡುವಂತೆ ದರ್ಶನ್ ಪರ ವಕೀಲರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಸಿಕ್ಕಿದ ಮೇಲೆ ದರ್ಶನ್ ಬಿಡುಗಡೆಯಾಗಿ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಗೃಹ ಇಲಾಖೆ ಅನುಮತಿ ನೀಡಿತ್ತು. ಅನುಮತಿ ನೀಡಿದ ಬೆನ್ನಲ್ಲೇ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಸಂಬಂಧಿಸಿದ ಮೂಲಗಳು ತಿಳಿಸಿವೆ.







