ಬೆಂಗಳೂರು: ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯು ಹುಟ್ಟೂರಿನಲ್ಲಿ ನಾಳೆ ನಡೆಯಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರಿನ (Madduru) ಸೋಮನಹಳ್ಳಿಯಲ್ಲಿ(Somanahalli) ಅವರ ಅಂತ್ಯಕ್ರಿಯೆ ನಡೆಯಲಿದೆ. ಸಂಬಂಧಿ ಆಗಿರುವ ಡಿಸಿಎಂ ಹೇಳಿದ್ದಾರೆ. ಮಾಜಿ ಸಿಎಂ, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2:30 ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು. ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ನೆರವೇರಿಸಲಾಗುವುದು ಎಂದು ಡಿಸಿಎಂ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.








