ಪುಣೆ: ಲಾರಿ ಚಾಲಕನೊಬ್ಬ ಫುಟ್ ಪಾತ್ ಮೇಲೆ ಮಲಗಿದ್ದವರ ಮೇಲೆ ಲಾರಿ ಹರಿಸಿದ ಘಟನೆಯೊಂದು ನಡೆದಿದೆ.
ಈ ಘಟನೆ ಪುಣೆಯಲ್ಲಿ ಭಾನುವಾರ ತಡರಾತ್ರಿ ನಡೆದಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಡಿದ ಮತ್ತಿನಲ್ಲಿ ಚಾಲಕ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಅಲ್ಲದೇ, ಘಟನೆಯಲ್ಲಿ ಇನ್ನೂ 6 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸಾಸೂನ್ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಾಸೂನ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೃತರು ಹಾಗೂ ಗಾಯಾಳುಗಳೆಲ್ಲರೂ ಅಮರಾವತಿ ನಿವಾಸಿಗಳಾಗಿದ್ದು, ಕಟ್ಟಡ ನಿರ್ಮಾಣ ಕೆಲಸಕ್ಕಾಗಿ ಪುಣೆಗೆ ಬಂದಿದ್ದರು. ಘಟನಾ ಸ್ಥಳಕ್ಕೆ ಎಸಿಪಿ ಖಾಡೆ, ಎಸಿಪಿ ಸೋನವಾನೆ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.