ಹುಬ್ಬಳ್ಳಿ ಸಾಯಿನಗರದ ಅಚ್ಚವ್ವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ ಭಾನುವಾರ ತಡರಾತ್ರಿ 1.30ರ ವೇಳೆ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು 10 ಅಯ್ಯಪ್ಪ ಮಾಲಾಧಾರಿಗಳು ತೀವ್ರ ಗಾಯಗೊಂಡಿದ್ದಾರೆ.
ಘಟನೆಯ ವಿವರಗಳು
ಅಯ್ಯಪ್ಪ ಮಾಲೆ ಧರಿಸಿ ವೃತ ಅಚರಿಸುತ್ತಿದ್ದ ಇವರು, ಈಶ್ವರ ದೇವಸ್ಥಾನದಲ್ಲಿ ವಾಸ್ತವ್ಯ ಮಾಡುತ್ತಿದ್ದರು. ರಾತ್ರಿ ಮಲಗಿದ್ದಾಗ ಮಾಲಾಧಾರಿಯೊಬ್ಬರ ಕಾಲು ಸಿಲಿಂಡರ್ಗೆ ತಾಗಿ ಉರುಳಿದೆ. ಪರಿಣಾಮ ರೆಗ್ಯೂಲೇಟರ್ ಸಡಿಲಗೊಂಡು ಗ್ಯಾಸ್ ಸೋರಿಕೆಯಾಗಿ, ದೇವಸ್ಥಾನದಲ್ಲಿ ಹಚ್ಚಿದ್ದ ದೀಪಕ್ಕೆ ತಗುಲಿದೆ. ಆಗ ಒಮ್ಮೆಲೆ ದೇವಸ್ಥಾನದ ಪ್ರಾಂಗಣದಲ್ಲಿ ಬೆಂಕಿಹೊತ್ತುಕೊಂಡು ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳ ಸ್ಥಿತಿ ಹೇಗಿದೆ..?
ಗಾಯಗೊಂಡ ಮಾಲಾಧಾರಿಗಳನ್ನು ಕೆಎಂಸಿ-ಆರ್ಐಗೆ ದಾಖಲಿಸಲಾಗಿದೆ. ಬಹುತೇಕ ಎಲ್ಲರ ದೇಹ ಶೇ 50 ರಷ್ಟು ಸುಟ್ಟಿದ್ದು, 58 ವರ್ಷದ ಅಜ್ಜಾಸ್ವಾಮಿ ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ರಾಜು ಹರ್ಲಾಪುರ (21), ಸಂಜಯ ಸವದತ್ತಿ (20), ವಿನಾಯಕ ಬಾತಕೇರ (12), ಪ್ರಕಾಶ ಬಾತಕೇರ (42), ಮಂಜು ತೋರದ (22), ಅಜ್ಜಾಸ್ವಾಮಿ (58), ಪ್ರವೀಣ ಚಲವಾದಿ (24), ತೇಜಸ್ ರೆಡ್ಡಿ (26) ಮತ್ತು ಶಂಕರ ರಾಯನಗೌಡ್ರ (29) ಸೇರಿದ್ದಾರೆ.
ಪೊಲೀಸ್ ತನಿಖೆ
ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಸಿಪಿ ನಂದಗಾವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.