ಶಿವಮೊಗ್ಗ: ಮೊಬೈಲ್ (Mobile) ಹೆಚ್ಚು ನೋಡಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಾವನ್ನಪ್ಪಿರುವ ಯುವತಿಯನ್ನು ಧನುಶ್ರೀ (20) ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ (Shivamogga) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಳು. ಹೀಗಾಗಿ ಪೋಷಕರು ಹೆಚ್ಚು ಮೊಬೈಲ್ ಬಳಕೆ ಮಾಡಬೇಡ ಎಂದು ಬುದ್ಧಿ ಹೇಳಿದ್ದಾರೆ. ಇದರಿಂದ ಮನನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ವಿಷ ಸೇವಿಸಿದ್ದ ಯುವತಿಯನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು (ಗುರುವಾರ) ಯುವತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಈ ಕುರಿತು ಕುಂಸಿ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








