ಬಳ್ಳಾರಿ: ವಿಶ್ವ ವಿಖ್ಯಾತ ಹಂಪಿಯಲ್ಲಿ ಹೊಸ ವರ್ಷದ ಆಚರಣೆಗೆ ಈ ಬಾರಿ ಯಾವುದೇ ನಿರ್ಬಂಧ ವಿಧಿಸಿಲ್ಲ. ಎಂದಿನಂತೆ ಪ್ರವಾಸಿಗರಿಗೆ ಹಂಪಿಗೆ (Hampi) ಮುಕ್ತ ಪ್ರವೇಶ ನೀಡಲಾಗಿದೆ.
ಈಗಾಗಲೇ ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದ ಹಲವೆಡೆ ಧಾರ್ಮಿಕ ಕ್ಷೇತ್ರಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಹಂಪಿಯಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲದ ಕಾರಣ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ.
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಡಿ.31 ಹಾಗೂ ಜ. 1ರಂದು ಲಕ್ಷಾಂತರ ಪ್ರವಾಸಿಗರು ಹಂಪಿಗೆ ಭೇಟಿ ನೀಡುವ ನಿರೀಕ್ಷೆ ಇದೆ. ದೇಶ, ವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಹಂಪಿ ಪ್ರವಾಸಕ್ಕೆ ಬರಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಪ್ರವಾಸಿಗರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.
ಹಂಪಿ ಭೇಟಿಗೆ ಬರುವ ಪ್ರವಾಸಿಗರು, ತುಂಗಭದ್ರಾ ಜಲಾಶಯ ಹಾಗೂ ಅಂಜನಾದ್ರಿಗೂ ಭೇಟಿ ನೀಡಲಿದ್ದಾರೆ. ಹೊಸ ವರ್ಷಾಚರಣೆ ನೆಪದಲ್ಲಿ ಧಾರ್ಮಿಕ ಕ್ಷೇತ್ರ ಹಂಪಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ವಿಜಯನಗರ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ.








