ಇಂದು ಬೆಳಗಿನ ಜಾವ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಅಂಬಡಗಟ್ಟಿ ಬಳಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅಪಘಾತದ ಪರಿಣಾಮ, ಸಚಿವೆಯ ಬೆನ್ನು ಮೂಳೆಗೆ ಪೆಟ್ಟಾಗಿದ್ದು, ವೈದ್ಯಕೀಯ ಪರೀಕ್ಷೆಯ ನಂತರ L1 ಮತ್ತು L4 ಮೂಳೆ ಮುರಿತವಾಗಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಪರಿಣಾಮ, ಕಾರಿನ ಮುಂಭಾಗ ತುಂಬಾ ಹಾನಿಯಾಗಿದೆ.
ಕಾರಿನಲ್ಲಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಅಪಾಯದಿಂದ ಪಾರಾಗಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನು ಮತ್ತು ಮುಖಕ್ಕೆ ಗಾಯವಾಗಿದ್ದು, ಅವರ ಸಹೋದರ Mlc ಚೆನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ. ತಕ್ಷಣ ಅವರಿಬ್ಬರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸಚಿವೆ ಮತ್ತು MLC ಚೆನ್ನರಾಜ ಹಟ್ಟಿಹೊಳಿ ಬೆಂಗಳೂರಿನಿಂದ ನಿನ್ನೆ ತಡರಾತ್ರಿ ಕಾರಿನಲ್ಲಿ ಬೆಳಗಾವಿಗೆ ಪ್ರಯಾಣಿಸುತ್ತಿದ್ದರು. ಬೆಳಗ್ಗಿನ ಜಾವ 6 ಗಂಟೆ ಸುಮಾರಿಗೆ ಈ ದುರಂತ ನಡೆದಿದೆ.








