ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರವೇ ಜವಾಬ್ದಾರಿಯಾಗಿದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೆಟ್ರೋ ಯೋಜನೆಗಳು ರಾಜ್ಯ ಸರ್ಕಾರದ ಅಧೀನದಲ್ಲಿದ್ದು, ದರ ಸಂಬಂಧಿತ ಎಲ್ಲ ನಿರ್ಧಾರಗಳನ್ನು ರಾಜ್ಯ ಸರ್ಕಾರವೇ ಕೈಗೊಳ್ಳುತ್ತದೆ ಎಂದರು.
ಮೆಟ್ರೋ ಟಿಕೆಟ್ ದರ ಹೆಚ್ಚಿಸಲು ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆ ನೀಡಲಾಗಿಲ್ಲ. ದರ ಏರಿಕೆ ಪ್ರಸ್ತಾವನೆ ನೀಡಿದ್ದೇ ರಾಜ್ಯ ಸರ್ಕಾರ. ಈಗ ನಾವು ಮೆಟ್ರೋ ದರ ಏರಿಕೆಗೆ ಕಾರಣ ಎಂದು ಆರೋಪಿಸುವುದು ಸರಿಯಲ್ಲ, ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ
ರಾಜ್ಯ ಸರ್ಕಾರದ ಕೆಲವು ಅಧಿಕಾರಿಗಳು ಮತ್ತು ರಾಜಕಾರಣಿಗಳು ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರ ಕಾರಣ ಎಂಬ ಆರೋಪ ಮಾಡಿರುವ ಬಗ್ಗೆ ಮಾತನಾಡಿದ ಸಚಿವರು, ಇದು ಸಂಪೂರ್ಣ ತಪ್ಪು. ದರ ನಿಗದಿ, ಪ್ರಸ್ತಾವನೆ, ಅನುಮೋದನೆ ಎಲ್ಲವೂ ರಾಜ್ಯ ಸರ್ಕಾರದ ಮಟ್ಟದಲ್ಲಿ ನಡೆಯುತ್ತದೆ. ಅದಕ್ಕೂ ಕೇಂದ್ರ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದರು.
ಬೆಂಗಳೂರು ಮೆಟ್ರೋ ದರ ಏರಿಕೆಯಿಂದ ಪ್ರಯಾಣಿಕರ ಮೇಲೆ ಹೆಚ್ಚುತ್ತಿರುವ ಹೊರೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಬೇಸರ ವ್ಯಕ್ತವಾಗಿದೆ. ದೈನಂದಿನ ಪ್ರಯಾಣಿಕರು ಹೆಚ್ಚಿದ ದರದಿಂದ ಬೇಸತ್ತಿದ್ದು, ಸೋಷಿಯಲ್ ಮೀಡಿಯಾದಲ್ಲಿ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.








