ಬೆಂಗಳೂರು: ಮುಸ್ಲಿಮರಿಗೆ ಮೀಸಲಾತಿ ಶೇ. 10ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂಬ ಮಾತುಗಳು ರಾಜ್ಯ ರಾಜಕೀಯ ವಲಯದಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ನಲ್ಲಿ ಘೋಷಣೆ ಮಾಡಿದ್ದರು. ಆದರೆ ಇದೀಗ ಮುಸ್ಲಿಮರ ಒಟ್ಟು ಮೀಸಲಾತಿಯನ್ನು ಶೇಕಡ 10ಕ್ಕೆ ಹೆಚ್ಚಿಸುವ ಸಾಧ್ಯತೆಯ ಬಗ್ಗೆ ಚರ್ಚೆ ಆರಂಭವಾಗಿದೆ.
ಸಚಿವ ಜಮೀರ್ ಅಹ್ಮದ್ ಖಾನ್ ಸೂಚನೆ
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್, ಮುಸ್ಲಿಮರಿಗೆ ಮೀಸಲಾತಿ ಶೇಕಡ 10ಕ್ಕೆ ಹೆಚ್ಚಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಈ ಮನವಿಯ ಆಧಾರದಲ್ಲಿ, ಸರ್ಕಾರ ಮುಸ್ಲಿಮರಿಗೆ 2B ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸುವ ಪ್ರಕ್ರಿಯೆ ಆರಂಭಿಸಬಹುದೇ? ಎಂಬ ಪ್ರಶ್ನೆಗಳು ಉದ್ಭವಿಸಿವೆ.
ರಾಜಕೀಯ ಅಸ್ಪಷ್ಟತೆ ಮತ್ತು ಪ್ರತಿಕ್ರಿಯೆಗಳು
ಈ ನಿರ್ಧಾರಕ್ಕೆ ಮುಸ್ಲಿಂ ಸಮುದಾಯದಿಂದ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ, ಆದರೆ ಬಿಜೆಪಿ ಸೇರಿದಂತೆ ವಿರೋಧ ಪಕ್ಷಗಳು ಇದನ್ನು ಮತಬ್ಯಾಂಕ್ ರಾಜಕೀಯ ಎಂದು ಆರೋಪಿಸಬಹುದು. ಹಿಂದಿನ ಬಿಎಸ್ವೈ ಸರ್ಕಾರ ಮುಸ್ಲಿಂ ಮೀಸಲಾತಿಯನ್ನು ರದ್ದುಪಡಿಸಿ ಹಿಂದೂ ಒಬಿಸಿ ಸಮುದಾಯಕ್ಕೆ ವರ್ಗಾಯಿಸಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅದನ್ನು ಮತ್ತೆ ಪುನಸ್ಥಾಪನೆ ಮಾಡುತ್ತಿದೆಯೇ ಅಥವಾ ಮತ್ತಷ್ಟು ಹೆಚ್ಚಿಸುವ ಉದ್ದೇಶದಲ್ಲಿದೆಯೇ? ಎಂಬುದರ ಬಗ್ಗೆ ಕೌತುಕ ಹುಟ್ಟಿಸಿದೆ.
ಈ ಬೆಳವಣಿಗೆಗಳು ರಾಜ್ಯ ರಾಜಕೀಯದಲ್ಲಿ ಮಹತ್ವದ ಪ್ರಭಾವ ಬೀರುವ ಸಾಧ್ಯತೆ ಇದೆ. ಮುಸ್ಲಿಂ ಮೀಸಲಾತಿಯ ಶೇಕಡಾವಾರು ಹೆಚ್ಚಿಸುವ ಬಗ್ಗೆ ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.