ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್ ಅಬ್ಬರಿಸಿಬೊಬ್ಬರಿಯುತ್ತಿದೆ. ದಿನದಿಂದ ದಿನಕ್ಕೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಲೇ ಇದೆ. ಈ ಹಿನ್ನೆಲೆ ಮತ್ತೊಮ್ಮೆ ರಾಜ್ಯದಾದ್ಯಂತ ಲಾಕ್ ಡೌನ್ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರದಲ್ಲಿ ಕೊರೊನಾ ರಣಕೇಕೆ ಮುಂದುವರಿದ ಕಾರಣ ಈಗಾಗಲೇ ಈ ಎರಡು ಜಿಲ್ಲೆಗಳಲ್ಲಿ ಮಂಗಳವಾರದಿಂದ ಒಂದು ವಾರ ಲಾಕ್ ಡೌನ್ ಘೋಷಣೆ ಆಗಿದೆ. ಬೇರೆ ಜಿಲ್ಲೆಗಳಲ್ಲೂ ಕೊರೊನಾ ವೈರಸ್ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ನಾಳೆ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಸಭೆಯಲ್ಲಿ ಜಿಲ್ಲೆಯ ಸ್ಥಿತಿ-ಗತಿಗಳ ಬಗ್ಗೆ ಮಾಹಿತಿ ಪಡೆದು, ಜಿಲ್ಲಾಧಿಕಾರಿಗಳು ನೀಡುವ ವರದಿ ಆಧರಿಸಿ ಸೋಮವಾರ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.








