ಬೆಂಗಳೂರು ವ್ಯಾಪ್ತಿಯಲ್ಲಿ ಶಿಸ್ತುಕ್ರಮದ ಅಧಿಕಾರ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪ್ರತ್ಯಾಯೋಜನೆ, ಸಮೀಕ್ಷೆ ಕುರಿತು ಸಿಎಂ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ.
ಬೆಂಗಳೂರು:ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೆತ್ತಿಕೊಂಡಿರುವ ಮಹತ್ವಾಕಾಂಕ್ಷೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ) ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಮತ್ತು ನೌಕರರು ಕರ್ತವ್ಯದಿಂದ ತಪ್ಪಿಸಿಕೊಳ್ಳುವಂತಿಲ್ಲ. ಒಂದುವೇಳೆ ಗೈರುಹಾಜರಾದರೆ ಅಥವಾ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಅಂತಹವರ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್, ಈ ಸಮೀಕ್ಷೆಯು ಸರ್ಕಾರದ ನೀತಿ ನಿರೂಪಣೆಗೆ ಅತ್ಯಂತ ಮಹತ್ವದ್ದಾಗಿದ್ದು, ಇದರಲ್ಲಿ ಭಾಗವಹಿಸುವ ನೌಕರರ ಬೇಜವಾಬ್ದಾರಿತನವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
*ಬಿಬಿಎಂಪಿ ಆಯುಕ್ತರಿಗೆ ಶಿಸ್ತುಕ್ರಮದ ಅಧಿಕಾರ
ವಿಶೇಷವಾಗಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ಸರ್ಕಾರಿ, ನಿಗಮ/ಮಂಡಳಿಗಳ ಅಧಿಕಾರಿಗಳು ಮತ್ತು ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವುದು ಕಂಡುಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಅಂತಹ ನೌಕರರ ಮೇಲೆ ಶಿಸ್ತುಕ್ರಮ ಮತ್ತು ದಂಡನೆ ವಿಧಿಸುವ ಅಧಿಕಾರವನ್ನು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿದೆ.
“ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಗಳು, 2021” ಹಾಗೂ “ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ಅನ್ವಯ” ಈ ಅಧಿಕಾರವನ್ನು ನೀಡಲಾಗಿದ್ದು, ಇನ್ನು ಮುಂದೆ ಸಮೀಕ್ಷಾ ಕರ್ತವ್ಯದಿಂದ ತಪ್ಪಿಸಿಕೊಳ್ಳುವವರ ವಿರುದ್ಧ ಮುಖ್ಯ ಆಯುಕ್ತರು ನೇರವಾಗಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಚಿವ ಪಾಟೀಲ್ ವಿವರಿಸಿದರು.
ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ
ರಾಜ್ಯಾದ್ಯಂತ ಸಮೀಕ್ಷಾ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಲು ಮತ್ತು ಎದುರಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ (ಸೆ.26) ಬೆಳಿಗ್ಗೆ 11.30ಕ್ಕೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಮೀಕ್ಷೆಯನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಬೇಕಾದ ಸ್ಪಷ್ಟ ನಿರ್ದೇಶನಗಳನ್ನು ನೀಡಲಾಗುವುದು ಎಂದು ಎಚ್.ಕೆ. ಪಾಟೀಲ್ ತಿಳಿಸಿದರು.
ರಾಜ್ಯದ ಪ್ರತಿಯೊಂದು ಸಮುದಾಯದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ನೈಜ ಚಿತ್ರಣವನ್ನು ಪಡೆಯಲು ಈ ಸಮೀಕ್ಷೆ ಅತ್ಯಗತ್ಯವಾಗಿದೆ. ಈ ವರದಿಯ ಆಧಾರದ ಮೇಲೆ ಮೀಸಲಾತಿ ಹಾಗೂ ಇನ್ನಿತರ ಕಲ್ಯಾಣ ಯೋಜನೆಗಳನ್ನು ರೂಪಿಸಲು ಸರ್ಕಾರ ಉದ್ದೇಶಿಸಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಸಮೀಕ್ಷೆಯನ್ನು ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದ್ದು, ಈ ರಾಷ್ಟ್ರೀಯ ಮಹತ್ವದ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಲು ಕಠಿಣ ಕ್ರಮಗಳಿಗೆ ಮುಂದಾಗಿದೆ.








