ಬೆಂಗಳೂರು : ಮಹಾಮಾರಿ ಕೊರೊನಾ ವಿರುದ್ಧದ ಹೋರಾಟದಲ್ಲಿ ವೈದ್ಯರು, ಆಸ್ಪತ್ರೆ ಸಿಬ್ಬಂದಿ, ನರ್ಸ್ ಗಳು, ಪೊಲೀಸರು ಸೇರಿದಂತೆ ಎಲ್ಲ ವಾರಿಯರ್ಸ್ ಗಳು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ತಮ್ಮ ಜೀವದ ಹಂಗು ತೊರೆದು ಹೋರಾಡುತ್ತಿದ್ದಾರೆ. ಈ ಸಮಯದಲ್ಲಿ ಅವರ ಬೆನ್ನಿಗೆ ನಿಲ್ಲುವುದು, ಅವರಿಗೆ ಧೈರ್ಯ ತುಂಬುವುದು ನಮ್ಮ ಕರ್ತವ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.
ವಿಕ್ಟೋರಿಯಾ ಆಸ್ಪತೆಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದು, ಇಲ್ಲಿರುವ ಸೋಂಕಿತರು, ವೈದ್ಯರು, ಆಸ್ಪತ್ರೆ ಸಿಬ್ಬಂದಿಗಳ ಜತೆ ಮಾತನಾಡಿ ಅವರಿಗೆ ಧೈರ್ಯ ತುಂಬಿದ್ದೇನೆ. ನಾನು ಈ ಹಿಂದೆ ವೈದ್ಯಕೀಯ ಶಿಕ್ಷಣ ಸಚಿವನಾಗಿ ಕೆಲಸ ಮಾಡಿದ್ದರಿಂದ ಇಲ್ಲಿನ ವೈದ್ಯಕೀಯ ಸಿಬ್ಬಂದಿ ಪರಿಚಯ ನನಗಿದೆ. ಆಸ್ಪತ್ರೆಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನೂ ಅರಿತಿದ್ದೇನೆ. ಹಲವಾರು ಸೋಂಕಿತರ ಜತೆಗೂ ನಾನು ಮಾತನಾಡಿದ್ದು, ಅವರು ಚಿಕಿತ್ಸೆ ಮತ್ತಿತರ ವ್ಯವಸ್ಥೆಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ಇಲ್ಲಿ 4 ವರ್ಷದ ಮಗುವಿನಿಂದ ಹಿಡಿದು 99 ವರ್ಷದ ವೃದ್ಧರವರೆಗೂ ಅನೇಕ ಸೋಂಕಿತರು ಚಿಕಿತ್ಸೆ ಪಡೆದು, ಗುಣಮುಖರಾಗಿ ಮನೆಗೆ ಮರಳಿದ್ದಾರೆ. ನೂರಾರು ಗರ್ಭಿಣಿಯರು ಚಿಕಿತ್ಸೆ ಪಡೆದು ಮನೆಗೆ ಮರಳಿರುವ ದಾಖಲೆಗಳನ್ನು ನೋಡಿದ್ದೇನೆ. ಇನ್ನೂ ವಿಶೇಷವೆಂದರೆ ಇಲ್ಲಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಹೋದವರು ಮತ್ತೆ ಇಲ್ಲಿಗೆ ಬಂದು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಮುಂದಾಗಿದ್ದಾರೆ. ಹೀಗಾಗಿ ಸೋಂಕಿತರು, ಚಿಕಿತ್ಸೆ ನೀಡುತ್ತಿರುವವರು ಇಬ್ಬರಿಗೂ ನಾವೆಲ್ಲರೂ ನೈತಿಕ ಬೆಂಬಲ ನೀಡಬೇಕಿದೆ. ಅವರು ಯಾವುದೇ ಕಾರಣಕ್ಕೂ ಹೆದರುವ ಅಗತ್ಯವಿಲ್ಲ ಎಂಬ ಮನೋಭಾವ ತುಂಬುವ ಹೊಣೆ ನಮ್ಮ-ನಿಮ್ಮೆಲ್ಲರದ್ದಾಗಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.








