ರಾಜ್ಯದಲ್ಲಿ ಚಳಿಗಾಲದ ತೀವ್ರತೆ ದಿನೇದಿನೇ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಹವಾಮಾನದಲ್ಲಿ ಭಾರೀ ಬದಲಾವಣೆ ಕಂಡುಬಂದಿದೆ. ವಿಶೇಷವಾಗಿ ಉತ್ತರ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಇಳಿಕೆಯಾಗಿದ್ದು, ಜನರು ತೀವ್ರ ಚಳಿಯಿಂದ ನಡುಗುತ್ತಿದ್ದಾರೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೀದರ್, ಕಲಬುರಗಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಶೀತಗಾಳಿಯ ಪ್ರಭಾವ ಹೆಚ್ಚಾಗಿದೆ. ಬೀದರ್‌ನಲ್ಲಿ ರಾಜ್ಯದಲ್ಲೇ ಅತಿ ಕಡಿಮೆ ತಾಪಮಾನ ದಾಖಲಾಗಿದ್ದು, ಕನಿಷ್ಠ 10.4 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡುಬಂದಿದೆ. ಕಲಬುರಗಿಯಲ್ಲಿ 11.2 ಡಿಗ್ರಿ ಸೆಲ್ಸಿಯಸ್, ವಿಜಯಪುರದಲ್ಲಿ 12.2 ಡಿಗ್ರಿ ಸೆಲ್ಸಿಯಸ್ ಹಾಗೂ ಬಾಗಲಕೋಟೆಯಲ್ಲಿ 12.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಚಳಿಗಾಳಿಯ ತೀವ್ರತೆಯಿಂದ ಬೆಳಗಿನ ಸಮಯದಲ್ಲಿ ಮಂಜು ಕವಿದ ವಾತಾವರಣ ನಿರ್ಮಾಣವಾಗಿದ್ದು, ಹಿರಿಯರು, ಮಕ್ಕಳು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರು ಹೆಚ್ಚು ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ. ಅಗತ್ಯವಿಲ್ಲದೆ ಬೆಳಿಗ್ಗೆ ಹಾಗೂ ತಡರಾತ್ರಿ ಹೊರಗೆ ಹೋಗುವುದನ್ನು ತಪ್ಪಿಸುವುದು, ಬಿಸಿ ಬಟ್ಟೆ ಧರಿಸುವುದು ಹಾಗೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಸೂಚಿಸಲಾಗಿದೆ.
ಮುಂದಿನ ಕೆಲವು ದಿನಗಳವರೆಗೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇದೇ ರೀತಿಯ ಚಳಿಗಾಳಿ ಮುಂದುವರಿಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.








