ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಸಂಬಂಧಿಸಿ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಖರ್ಗೆ ಅವರ ಹೇಳಿಕೆ ಸಂಪೂರ್ಣ ಸತ್ಯ ಮತ್ತು ಎಲ್ಲರೂ ಒಪ್ಪಿಕೊಳ್ಳಬೇಕಾದ ವಿಚಾರ ಎಂದು ಸಿಎಂ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವಿಲ್ಲ ಎಂಬುದು ಸ್ಪಷ್ಟ ಎಂದು ಅವರು ಪುನರುಚ್ಚರಿಸಿದ್ದಾರೆ.
ಇನ್ನೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಾಗಿ ನಡೆಯುತ್ತಿರುವ ಚರ್ಚೆಗಳ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಈ ವಿಷಯದಲ್ಲಿ ಅಂತಿಮ ತೀರ್ಮಾನವನ್ನು ರಾಹುಲ್ ಗಾಂಧಿಯವರೇ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿ ನಿರ್ಧರಿಸುತ್ತಾರೆ. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಸಂಪೂರ್ಣವಾಗಿ ಬದ್ಧರಾಗಿರುತ್ತೇವೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಈಗಾಗಲೇ ಪಕ್ಷದ ವರಿಷ್ಠ ನಾಯಕರೊಂದಿಗೆ ನಾನು ಮಾತನಾಡಿದ್ದೇನೆ. ಈ ವಿಷಯವನ್ನು ಹೈಕಮಾಂಡ್ ಮಟ್ಟದಲ್ಲೇ ಚರ್ಚಿಸಿ ತೀರ್ಮಾನಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಪಕ್ಷದ ಶಿಸ್ತಿಗೂ, ನಾಯಕತ್ವದ ನಿರ್ಧಾರಕ್ಕೂ ಎಲ್ಲರೂ ಬದ್ಧರಾಗಿರಬೇಕು ಎಂಬ ಸಂದೇಶವನ್ನು ಸಿಎಂ ಸಿದ್ದರಾಮಯ್ಯ ಈ ಮೂಲಕ ನೀಡಿದ್ದಾರೆ.








