ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಕಾಂಗ್ರೆಸ್ ಪಕ್ಷದ ಉಚ್ಛಾಟಿತ ನಾಯಕಿ ಕವಿತಾ ರೆಡ್ಡಿ ತೀವ್ರ ವಾಗ್ದಾಳಿ ನಡೆಸಿದ್ದು, ಡಿಕೆಶಿ ಒಬ್ಬ ಸ್ವಾರ್ಥಿ ಹಾಗೂ ನಂಬಿಕೆಗೆ ಅರ್ಹರಲ್ಲದ ವ್ಯಕ್ತಿ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅವರು, ಡಿಕೆ ಶಿವಕುಮಾರ್ ಅವರ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದ್ದಾರೆ. ತಮ್ಮ ವೈಯಕ್ತಿಕ ರಾಜಕೀಯ ಬೆಳವಣಿಗೆಗಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಬಲಿ ಕೊಡಲು ಡಿಕೆಶಿ ಅವರು ಹಿಂದೆಮುಂದೆ ನೋಡುವುದಿಲ್ಲ ಎಂದು ಕವಿತಾ ರೆಡ್ಡಿ ಕಿಡಿಕಾರಿದ್ದಾರೆ.
ಡಿಕೆಶಿ ವಿರುದ್ಧ ಕವಿತಾ ರೆಡ್ಡಿ ಅವರ ಪ್ರಮುಖ ಆರೋಪಗಳು ಇಲ್ಲಿವೆ:
ಮಾತು ತಪ್ಪಿದ ನಾಯಕ
ಡಿ.ಕೆ. ಶಿವಕುಮಾರ್ ಅವರು ಪಕ್ಷದ ಪದಾಧಿಕಾರಿಗಳಿಗೆ ಹಾಗೂ ಕಾರ್ಯಕರ್ತರಿಗೆ ನೀಡಿದ ಒಂದೇ ಒಂದು ಭರವಸೆಯನ್ನೂ ಈಡೇರಿಸಿಲ್ಲ. ಅವರು ನೀಡಿದ ಮಾತನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ವಿಪರ್ಯಾಸವೆಂದರೆ, ತಾವೇ ಮಾತು ತಪ್ಪುವ ಡಿಕೆಶಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಮಾತು ಉಳಿಸಿಕೊಳ್ಳಬೇಕೆಂದು ಒತ್ತಾಯಿಸುತ್ತಿರುವುದು ಹಾಸ್ಯಾಸ್ಪದ ಸಂಗತಿ ಎಂದು ಕವಿತಾ ರೆಡ್ಡಿ ಲೇವಡಿ ಮಾಡಿದ್ದಾರೆ.
ಸ್ವಾರ್ಥಕ್ಕಾಗಿ ಕಾರ್ಯಕರ್ತರ ಬಲಿ
ಡಿಕೆಶಿ ಅವರು ಸಂಪೂರ್ಣವಾಗಿ ಸ್ವಾರ್ಥಿಯಾಗಿದ್ದು, ಕೇವಲ ತನಗಾಗಿ ಮಾತ್ರ ರಾಜಕೀಯ ಮಾಡುತ್ತಿದ್ದಾರೆ. ನನ್ನಂತಹ ಎಷ್ಟೋ ಪ್ರಾಮಾಣಿಕ ಕಾರ್ಯಕರ್ತರಿಗೆ ಅವರು ವಂಚಿಸಿದ್ದಾರೆ. ತಮ್ಮ ಸ್ವಾರ್ಥ ಸಾಧನೆಗಾಗಿ ಬದ್ಧತೆಯುಳ್ಳ ಕಾರ್ಯಕರ್ತರನ್ನು ರಾಜಕೀಯವಾಗಿ ಬಲಿ ಪಡೆಯುತ್ತಿದ್ದಾರೆ ಎಂದು ಕವಿತಾ ರೆಡ್ಡಿ ಆಕ್ರೋಶ ಹೊರಹಾಕಿದ್ದಾರೆ.
ಈ ಹಿಂದೆ ಎಐಸಿಸಿ ವಕ್ತಾರೆಯಾಗಿ ಗುರುತಿಸಿಕೊಂಡಿದ್ದ ಕವಿತಾ ರೆಡ್ಡಿ, ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡಿದ್ದರು. ಇದೀಗ ಉಪಮುಖ್ಯಮಂತ್ರಿಯವರ ವಿರುದ್ಧವೇ ನೇರ ಆರೋಪ ಮಾಡಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಹಾಗೂ ಕಾಂಗ್ರೆಸ್ ಪಾಳಯದಲ್ಲಿ ಹೊಸ ಸಂಚಲನ ಮೂಡಿಸಿದೆ.







